ಮೋದಿ ಭಯೋತ್ಪಾದಕ ಹೇಳಿಕೆಗೆ ಬಿಜೆಪಿ ಕೆಂಡ; ಮಲ್ಲಿಕಾರ್ಜುನ ಖರ್ಗೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

Haveri, BIJ, Yuva Morcha, Protest, on Kharge Statement,
Haveri, BIJ, Yuva Morcha, Protest, on Kharge Statement,
Published on
ಹಾವೇರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೆರರಿಸ್ಟ್ ಎಂದಿರುವ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಗುರುವಾರ ಮೈಲಾರ ಮಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಖರ್ಗೆ ಭಾವಚಿತ್ರಕ್ಕೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿರಣ ಕೋಣನವರ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯದಲ್ಲಿ ಹಿರಿಯರು ಹಾಗೂ ಶಾಸಕರಾಗಿ, ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ, ಸಂವಿದಾನ ಬದ್ಧವಾಗಿ ಆಯ್ಕೆಯಾದ ದೇಶದ ಪ್ರಧಾನಿಯನ್ನು ಭತೋತ್ಪಾದಕ ಎಂದು ಕರೆಯುವುದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಖರ್ಗೆಯವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಸ್ಥಳೀಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಲ್ಲಾಭಕ್ಷ ತಿಮ್ಮಾಪೂರ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಸ್ಥಿಮಿತಿ ಕಳೆದುಕೊಂಡು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತರ ನಮಾಜ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದರು. ನೀವು ನಮಾಜ್ ಮಾಡುವ ಸಂದರ್ಭದಲ್ಲಿ ಹಾವು ಬಂದರೆ ನಮಾಜ್ ನಿಲ್ಲಿಸಿ ಹಾವು ಕೊಲ್ಲಬೇಕು. ಅದೇ ರೀತಿ ಬಿಜೆಪಿ ವಿಷಪೂರಿತ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದರು. ಇದೀಗ ಪತ್ರಿಕಾಗೋಷ್ಠಿಯಲ್ಲಿ ಮೋದಿಜಿಯವರನ್ನು ಭಯೋತ್ಪಾದಕ ಎಂದು ಕರೆದಿರುವುದು ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ದೂರಿದರು.
ನಗರ ಘಟಕದ ಅಧ್ಯಕ್ಷ ಕಿರಣ ಕೋಳ್ಳಿ ಮಾತನಾಡಿ, ಕಾಂಗ್ರೆಸ್ ಪಕ್ಷದ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿರುವುದು ಶೋಭೆಯಲ್ಲ. ಇಡೀ ವಿಶ್ವವೇ ಒಪ್ಪಿಕೊಂಡಿರುವ ವಿಶ್ವನಾಯಕನ ಬಗ್ಗೆ ಭೋಯೊತ್ಪಾಕ ಎಂದು ಕರೆಯುವುದು ದೇಶಕ್ಕೆ ಮಾಡುವ ಅಪಮಾನ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಸಂತೋಷ ಆಲದಕಟ್ಟಿ ಮಾತನಾಡಿ, ಈ ಹಿಂದೆ ಸೋನಿಯಾ ಗಾಂಧಿಯವರು ಮೋದಿಜಿಯವರುನ್ನು ಸಾವಿನ ವ್ಯಾಪಾರಿ ಎಂದು ಕರೆದಿದ್ದರು. ಇಗ ಮಲ್ಲಿಕಾರ್ಜುನ ಖರ್ಗೆಯವರು ತಮಿಳುನಾಡಿನ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಮಂತ್ರಿಯವರನ್ನು ಭಯೋತ್ಪಾದಕರೆಂದು ಕರೆದಿರುವವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತಂದಂತಾಗಿದೆ ಎಂದರು.
ಬಳಿಕ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿದರು. ಯುವ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net