ಹಾವೇರಿ; ಜಿಲ್ಲಾ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಪಡೆ ಮುತ್ತಿಗೆ ಯತ್ನ

congress, protest
congress, protest
Published on
ಹಾವೇರಿ: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದ ಕಾಗಿನೆಗೆ ರಸ್ತೆಯಲ್ಲಿನ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಇಲ್ಲಿನ ಕಾಗಿನೆಲೆ ರಸ್ತೆಯ ಮುರುಘಾ ಮಠದಿಂದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ರ‌್ಯಾಲಿ ಮೂಲಕ ತೆರಳಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಅವರನ್ನು ತಡೆದರು. ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಯವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಬಿಜೆಪಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ರಾಜಕಾರಣದ ದ್ವೇಷದ ಹಿನ್ನೆಲೆಯಲ್ಲಿ ಇನ್ನಿಲ್ಲದ ಆರೋಪ ಮಾಡುತ್ತಿದೆ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಇಬ್ಬರೂ ನಿರ್ದೋಷಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ, ಇಲ್ಲಸಲ್ಲದ ಆರೋಪ ಮಾಡುತ್ತ ಕಿರುಕುಳ ನೀಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರು ಚುನಾವಣಾ ಆಯೋಗ, ಸಿಬಿಐ, ಇಡಿ ಇಲಾಖೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡು ದ್ವೇಷದ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಏನಾದರೂ ನೆಪ ಮಾಡಿ ನಮ್ಮ ನಾಯಕರನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಈ ಕೂಡಲೇ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಮೆಹರವಾಡೆ, ಬ್ಲಾೃಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ, ಎಸ್.ಎಫ್.ಎನ್. ಗಾಜೀಗೌಡ್ರ, ರಾಘವೇಂದ್ರ ಬಾಸೂರ, ಜಮೀರ್ ಜಿಗರಿ, ಗಂಗಾಧರ, ಪ್ರಸನ್ನ ಹಿರೇಮಠ, ಉಮರ್ ಇನಾಮದಾರ, ವಿನಯ ಪಾಟೀಲ, ಗದಿಗೆಪ್ಪ ನೆಲೋಗಲ್ಲ, ನವೀದ್ ವರ್ದಿ, ಸುಭಾಷ ಚವ್ಹಾಣ, ಪ್ರೇಮಾ ಪಾಟೀಲ, ನಂದಾ ಕಳಸೂರ, ಶಾಂತಾ ಶಿರೂರ, ಮಂಜುನಾಥ ಕಚವಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net