ರೋಗಿಗಳಿಗೆ ಶೀಘ್ರವೇ ಎಂಆರ್‌ಐ ಸೇವೆ ಒದಗಿಸಿ; ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಶಾಸಕ ರುದ್ರಪ್ಪ ಲಮಾಣಿ ಸೂಚನೆ

Haveri, District Hospital, MRI Scanning,
Haveri, District Hospital, MRI Scanning,
Published on
ಹಾವೇರಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ಎಂಆರ್‌ಐ ಸ್ಕಾೃನಿಂಗ್ ಯಂತ್ರ ಜಿಲ್ಲಾಸ್ಪತ್ರೆಗೆ ಬಂದಿದೆ. ಯಂತ್ರ ಅಳವಡಿಕೆ ಕಾರ್ಯ ನಡೆದಿದ್ದು, ಶೀಘ್ರದಲ್ಲೇ ರೋಗಿಗಳಿಗೆ ಎಂಆರ್‌ಐ ಸ್ಕಾೃನಿಂಗ್ ಸೇವೆ ಆರಂಭಿಸಿ ಎಂದು ವಿಧಾನಸಭಾ ಸಭಾಧ್ಯಕ್ಷ ಹಾಗೂ ಶಾಸಕ ರುದ್ರಪ್ಪ ಲಮಾಣಿ ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರ ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ಆಸ್ಪತ್ರೆಯ ಮೂಲ ಸೌಲಭ್ಯಗಳು ಹಾಗೂ ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ, ಉಚಿತ ಔಷಧ ವಿತರಣೆ ಮತ್ತು ಸ್ವಚ್ಛತೆಯ ಕುರಿತು ರೋಗಿಗಳಿಂದ ಹಾಗೂ ಅವರ ಸಂಬಂಧಿಕರಿಂದ ಕುಂದುಕೊರತೆಗಳನ್ನು ಆಲಿಸಿದರು.
ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು. ಎಂಆರ್‌ಐ, ಸ್ಕಾೃನಿಂಗ್ ಸೇವೆಯನ್ನು ವಾರಗಟ್ಟಲೆ ಕಾಯಿಸದೇ, ತ್ವರಿತವಾಗಿ ಒದಗಿಸಬೇಕು. ರೋಗಿಗಳ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ಸೂಕ್ತ ಚಿಕಿತ್ಸೆ ಮತ್ತು ಔಷಧಗಳನ್ನು ಸಕಾಲದಲ್ಲಿ ವಿತರಿಸಬೇಕು ಎಂದು ವೈದ್ಯರಿಗೆ ಹಾಗೂ ಆಸ್ಪತ್ರೆಯ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಹಾವೇರಿ ಜಿಲ್ಲಾಸ್ಪತ್ರೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ಮಾದರಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಅಗತ್ಯವಿರುವ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು. ಸಾರ್ವಜನಿಕರಿಗೆ ಮತ್ತು ಬಡ ರೋಗಿಗಳಿಗೆ ಯಾವುದೇ ಕೊರತೆಯಾಗದಂತೆ ಇನ್ನಷ್ಟು ಅಭಿವೃದ್ಧಿಪಡಿಸಿ, ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತೆ ಮಾಡಲು ನಾನು ಸದಾ ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net