ರಟ್ಟೀಹಳ್ಳಿ ಪಪಂ ಅಧ್ಯಕ್ಷ, ಉಪಾಧ್ಯಕ್ಷರ ಸದಸ್ಯತ್ವ ಅನರ್ಹ; ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪ, ಡಿಸಿ ಆದೇಶ

Rattihalli, Pattana Panchayti,
Rattihalli, Pattana Panchayti,
Published on
ಹಾವೇರಿ: ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪದಡಿ ರಟ್ಟೀಹಳ್ಳಿ ಪಟ್ಟಣ ಪಂಚಾಯ್ತಿಗೆ ಇತ್ತೀಚೆಗೆ ಆಯ್ಕೆಯಾಗಿದ್ದ ಮೊದಲ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ಹಾಗೂ ಉಪಾಧ್ಯಕ್ಷ ಶಿವಕುಮಾರ ಉಪ್ಪಾರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೋಮವಾರ ಆದೇಶ ಹೊರಡಿಸಿದ್ದಾರೆ.
ಪಟ್ಟಣ ಪಂಚಾಯಿತಿ ಘೋಷಣೆಯಾದ ಬಳಿಕ ಆಗಸ್ಟ್ 17ರಂದು ಮೊದಲ ಬಾರಿಗೆ ಪಟ್ಟಣದ 15 ವಾರ್ಡ್‌ಗಳಿಗೆ ಚುನಾವಣೆ ನಡೆಸಲಾಗಿತ್ತು. 15 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 7, ಬಿಜೆಪಿ 6 ಹಾಗೂ ಪಕ್ಷೇತರ 2 ಸದಸ್ಯರು ಆಯ್ಕೆಯಾಗಿದ್ದರು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಅ ವರ್ಗಕ್ಕೆ ಮೀಸಲಾಗಿತ್ತು.
ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ಹಾಗಾಗಿ, ಅತಂತ್ರ ಸ್ಥಿತಿ ಸೃಷ್ಟಿಯಾಗಿತ್ತು. ಚುನಾವಣೆಗೂ ಪೂರ್ವದಲ್ಲಿ ಇಬ್ಬರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿ, ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಕಾಂಗ್ರೆಸ್‌ನಿಂದ ಗೆದ್ದಿದ್ದ ರವೀಂದ್ರ ಮುದಿಯಪ್ಪನವರ ತಮಗೇ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಬೇರೊಬ್ಬರನ್ನು ಪಕ್ಷ ಆಯ್ಕೆ ಮಾಡಿತ್ತು. ಇದರಿಂದಾಗಿ ರವೀಂದ್ರ ಮುದಿಯಪ್ಪನವರ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲ ಪಡೆದು ರವೀಂದ್ರ ಮುದಿಯಪ್ಪನವರ ಅಧ್ಯಕ್ಷರಾಗಿ ಹಾಗೂ ಪಕ್ಷೇತರರಾಗಿದ್ದ ಶಿವಕುಮಾರ ಉಪ್ಪಾರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ವಿಪ್ ಉಲ್ಲಂಘನೆ ಬಗ್ಗೆ ದೂರು :
ಈ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ಪಕ್ಷದ ಅಧಿಕಾರದ ಕನಸು ಛಿದ್ರಗೊಂಡಿತ್ತು. ಈ ಕುರಿತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದರು. ಇಬ್ಬರು ಸದಸ್ಯರು ಪಕ್ಷ ಜಾರಿಗೊಳಿಸಿದ್ದ ವಿಪ್ ಉಲ್ಲಂಘಿಸಿದ್ದರು. ಪಕ್ಷಾಂತರ ನಿಷೇಧ ಕಾಯ್ದೆಯಡಿ ಇವರ ಸದಸ್ಯತ್ವವನ್ನು ಅನರ್ಹಗೊಳಿಸಿ ಎಂದು ಕೋರಿದ್ದರು. ಈ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ, ಇಬ್ಬರ ಸದಸ್ಯತ್ವವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನರ್ಹಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ವಿಚಾರ ರಟ್ಟಿಹಳ್ಳಿ ಪಟ್ಟಣ ಪಂಚಾಯ್ತಿಯಲ್ಲಿ ಮತ್ತೊಂದು ಬೆಳವಣಿಗೆಗೆ ಕಾರಣವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net