ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಮಾ.1ರಂದು; ಜಿಲ್ಲೆಗೆ ಕಪ್ಪುಚುಕ್ಕೆ ಬಾರದಂತೆ ಪಾರದರ್ಶಕವಾಗಿ ಆಯೋಜಿಸಿ; ಅಧಿಕಾರಿಗಳಿಗೆ ಎಡಿಸಿ ಡಾ.ನಾಗರಾಜ ಎಲ್. ಸೂಚನೆ
residencial shool, entrance exam,
Published on:
Copied
Follow Us
ಹಾವೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಮಾರ್ಚ್ 1ರಂದು ಜಿಲ್ಲೆಯ 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪದೋಷ ಆಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈವರೆಗೆ ಜಿಲ್ಲೆಯಲ್ಲಿ ಎಲ್ಲ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಮಾಡಲಾಗಿದೆ. ಜಿಲ್ಲೆಗೆ ಕಪ್ಪುಚುಕ್ಕೆ ಬಾರದಂತೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನಿರ್ದೇಶಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದರು.
ಡಿ ಗ್ರೂಪ್ ಸೇರಿದಂತೆ ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಿದ ಎಲ್ಲರಿಗೂ ಗುರುತುಪತ್ರ ನೀಡಬೇಕು. ಪರೀಕ್ಷೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆ 9 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಮಾರ್ಗಸೂಚಿ ಅನ್ವಯ ಓಎಂಆರ್ ಶೀಟ್‌ನಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಕೊಠಡಿ ಮೇಲ್ವಿಚಾರಕರೇ ಬರೆಯಬೇಕು ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಅವರು ಮಾತನಾಡಿದರು.
ಸಭೆಯಲ್ಲಿ ಹಾವೇರಿ ತಹಸೀಲ್ದಾರ್ ಶರಣಮ್ಮ ಕೆ., ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್.ಪಾಟೀಲ, ಎಂ.ಬಿ.ಅಂಬಿಗೇರ, ಶ್ರೀಧರ, ಶ್ಯಾಮಸುಂದರ ಅಡಿಗ, ಆರ್.ವಿ.ಚಿನ್ನಿಕಟ್ಟಿ, ಎಚ್.ಜಿ.ಕೋಟಿ, ವಿವಿಧ ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
12 ತಂಡ ರಚನೆ:
ಪ್ರಶ್ನೆ ಪತ್ರಿಕೆ ಬಂಡಲ್ ತೆಗೆದುಕೊಂಡುಹೋಗಲು ಪ್ರತಿ ತಾಲೂಕಿಗೂ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಾಂಶುಪಾಲರು ಒಳಗೊಂಡ ತ್ರಿಸದಸ್ಯ ಸಮಿತಿಯ 12 ತಂಡಗಳನ್ನು ನೇಮಿಸಲಾಗುವುದು. ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚಿಸಿದರು.
ಸೂಕ್ತ ಭದ್ರತೆ :
ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ತಲಾ ಒಬ್ಬ ಶುಶ್ರೂಷಕಿಯರನ್ನು ನಿಯೋಜನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.