ಶಿಗ್ಗಾಂವ: ವಿದ್ಯಾರ್ಥಿಗಳು students ಛಲ, ಗುರಿ, ಪರಿಶ್ರಮದಿಂದ ಒಳ್ಳೆಯ ಶಿಕ್ಷಣ ಪಡೆದರೆ ಮಾತ್ರ ಶೈಕ್ಷಣಿಕ ಜೀವನ ಯಶಸ್ವಿಗೊಳ್ಳಲು ಸಾಧ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪಟ್ಟಣದ ಬಸವರಾಜ ಬೊಮ್ಮಾಯಿ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಸೋಮಪ್ಪ ಬೊಮ್ಮಾಯಿ ಅವರ 102ನೇ ಜನ್ಮ ದಿನೋತ್ಸವ ಹಾಗೂ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಪದವಿ ತರಗತಿಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎದುರಾಗುವಂತಹ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಬೇಕು. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಅಂದಾಗ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.
ಸೋಮಪ್ಪ ಬೊಮ್ಮಾಯಿ ಅವರು ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿದ್ದಾಗ ಶಿಕ್ಷಣವನ್ನು ಮೂಲಭೂತ ಹಕ್ಕು ಮಾಡಿ ಕಾಯ್ದೆ ಜಾರಿಗೆ ತಂದು ದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದರು. ಎಸ್.ಆರ್. ಬೊಮ್ಮಾಯಿ ಅವರು ದೇಶದ ಸ್ವಾತಂತ್ರ್ಯ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ನಂತರ ತಮ್ಮ ರಾಜಕೀಯ ಜೀವನದಲ್ಲೂ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದರು ಎಂದರು.
ಶಿಗ್ಗಾಂವ, ಸವಣೂರ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿದರು.
ರಾಜಕೀಯವಾಗಿ ನನ್ನ ಹೆಸರು ಬಳಕೆ ಮಾಡಿ ತೇಜೋವಧೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ನನ್ನ ತೇಜೋವಧೆಯಿಂದ ಮಾಡುವುದರಿಂದ ಅವರಿಗೆ ಒಳ್ಳೆಯದಾಗುವುದಾರೆ ಆಗಲಿ. ನನ್ನ ರಾಜಕೀಯ ಜೀವನದಲ್ಲಿ ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಜೀವನದ ಕೊನೆ ಉಸಿರು ಇರುವವರೆಗೂ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಬೊಮ್ಮಾಯಿ ಹೇಳಿದರು.