

ಹಾವೇರಿ: ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ ಆರೋಪದಡಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸೇರಿ ಮತ್ತೆ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಶಿಗ್ಗಾವಿನ ಮಾಮಲೆ ದೇಸಾಯಿ ಸಂಯುಕ್ತ ಪದವಿಪೂರ್ವ ವಿದ್ಯಾಲಯದಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರದ ಮುಖ್ಯಸ್ಥ ಹಾಗೂ ಅದೇ ವಿದ್ಯಾಲಯದ ಪ್ರಾಚಾರ್ಯ ರಮಾಕಾಂತ ಭಟ್, ಪರೀಕ್ಷಾ ಕೊಠಡಿಯ ಮೇಲ್ವಿಚಾರಕ ಹಾಗೂ ಉಪನ್ಯಾಸಕ ಬಸವರಾಜ ಸವಡಿ ಮತ್ತು ಡ್ರೆಸ್‌ಕೋಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕ ರಾಜು ದುಂಡಪ್ಪನವರ ಅಮಾನತುಗೊಂಡವರೆಂದು ತಿಳಿದುಬಂದಿದೆ.ಇದರೊಂದಿಗೆ ಪ್ರಕರಣದಲ್ಲಿ ಅಮಾನತುಗೊಂಡವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಆದರೆ, ಪರೀಕ್ಷಾ ಕೇಂದ್ರದಲ್ಲಿ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಲೋಕೋಪಯೋಗಿ ಇಲಾಖೆ (PwD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ವಿರುದ್ಧ ಇನ್ನೂ ಅಮಾನತು ಕ್ರಮ ಜರುಗಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.
ವಿಎಒ ನೇಮಕಾತಿ ಪರೀಕ್ಷೆಯಲ್ಲಿ ಶಿಗ್ಗಾಂವಿಯ ಶಂಕರ ಬನ್ನೂರು ಎಂಬ ಅಭ್ಯರ್ಥಿ ಮೊಬೈಲ್ ಬಳಸಿ ಪ್ರಶ್ನೆಗಳಿಗೆ ಉತ್ತರ ಹುಡುಕಿದ ಆರೋಪ ಪ್ರಕರಣದ ಗಂಭೀರತೆ ಹೆಚ್ಚಿಸಿತ್ತು. ಪರೀಕ್ಷೆಯಲ್ಲಿ 151.25 ಅಂಕ ಗಳಿಸಿದ್ದ ಅಭ್ಯರ್ಥಿಯ ಅಕ್ರಮ ಬೆಳಕಿಗೆ ಬಂದ ಬಳಿಕ ಪರೀಕ್ಷಾ ವ್ಯವಸ್ಥೆಯಲ್ಲಿನ ಭದ್ರತಾ ಲೋಪಗಳ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು. ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ, ಡ್ರೆಸ್‌ಕೋಡ್, ಮೇಲ್ವಿಚಾರಣೆ ಸೇರಿದಂತೆ ಹಲವು ಹಂತಗಳಿದ್ದರೂ ಮೊಬೈಲ್ ಒಳಗೆ ಪ್ರವೇಶಿಸಿದ್ದು ಹೇಗೆ? ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿತ್ತು.
ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಜಿಲ್ಲಾ ಪೊಲೀಸ್ ಇಲಾಖೆ, ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಈಗಾಗಲೇ ಅಮಾನತುಗೊಳಿಸಿದೆ. ಇದೀಗ ಪರೀಕ್ಷಾ ಕೇಂದ್ರದ ಜವಾಬ್ದಾರಿ ನಿರ್ವಹಿಸಿದ್ದ ಮೂವರು ಸಿಬ್ಬಂದಿಯ ಮೇಲೂ ಅಮಾನತು ಕ್ರಮ ಜರುಗಿಸಲಾಗಿದೆ. ಈ ಮೂಲಕ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಸೇರಿ ಒಟ್ಟು ಏಳು ಮಂದಿ ಅಮಾನತುಗೊಂಡಂತಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಲೋಕೋಪಯೋಗಿ ಇಲಾಖೆಯ ಎಇಇ ಅವರಿಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಆದರೆ, ಉಳಿದ ಸಿಬ್ಬಂದಿ ಅಮಾನತುಗೊಂಡಿದ್ದರೂ ಎಇಇ ವಿರುದ್ಧ ಈವರೆಗೆ ಅಮಾನತು ಕ್ರಮ ಕೈಗೊಂಡಿಲ್ಲ. ಪರೀಕ್ಷಾ ಕೇಂದ್ರದ ಮೇಲ್ವಿಚಾರಣೆ ಹಾಗೂ ಭದ್ರತಾ ವ್ಯವಸ್ಥೆಯ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ಕರ್ತವ್ಯ ನಿರ್ವಹಣೆಯ ಬಗ್ಗೆಯೂ ಪರಿಶೀಲನೆ ನಡೆಯಬೇಕಿದೆ.
ಮೊಬೈಲ್ ಬಳಸಿ ಅಕ್ರಮ ಎಸಗಿದ ಅಭ್ಯರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ, ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಪ್ರವೇಶಿಸಲು ಅವಕಾಶವಾದದ್ದು ಹೇಗೆ? ತಪಾಸಣೆ ಮತ್ತು ಮೇಲ್ವಿಚಾರಣೆಯಲ್ಲಿ ಎಲ್ಲಿ ಲೋಪವಾಗಿದೆ? ಜಾಮರ್ ಸೇರಿದಂತೆ ಭದ್ರತಾ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಿತ್ತೇ? ಎಂಬ ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ. ಅಕ್ರಮಕ್ಕೆ ನೇರವಾಗಿ ಕಾರಣರಾದವರಷ್ಟೇ ಅಲ್ಲದೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಎಲ್ಲರ ಹೊಣೆಗಾರಿಕೆಯನ್ನೂ ನಿಗದಿಪಡಿಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.