ಹಾವೇರಿ: ಸಂಸತ್‌ನ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮತ್ತು ಅಗೌರವದ ಹೇಳಿಕೆ ನೀಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರನ್ನು ಗೇಲಿ ಮಾಡುವ ಅಮಿತ್ ಶಾ ಹೇಳಿಕೆಯು ಬಿಜೆಪಿ ಮತ್ತು ಅದರ ಸಿದ್ಧಾಂತವು ಅಂಬೇಡ್ಕರ್ ಅವರ ಜೀವನ, ಪರಂಪರೆ ಮತ್ತು ಪಾಠಗಳ ಬಗ್ಗೆ ಮನದಾಳದಲ್ಲಿ ಹೊಂದಿರುವ ತಿರಸ್ಕಾರ ಮನೊಭಾವವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿದ್ದಾರೆ. ಗೃಹ ಸಚಿವರು ತಮ್ಮ ನಾಚಿಕೆಗೇಡಿನ ಹೇಳಿಕೆಯನ್ನು ತಕ್ಷಣ ಹಿಂಪಡೆದು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.