ಎಚ್‌ಡಿಕೆ, ಬಿಜೆಪಿ ನಾಯಕರ ವಿರುದ್ಧವೂ ತನಿಖೆ ಆಗಲಿ: ಮುಖ್ಯಮಂತ್ರಿ ಚಂದ್ರು ಆಗ್ರಹ

chandru
Published on

ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಮಾತ್ರವಲ್ಲ ಎಲ್ಲರೂ ಭಾಗಿಯಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.


ಈ ಪ್ರಕರಣದಲ್ಲಿ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧವೂ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.


ರಾಜ್ಯ ಸರ್ಕಾರವು ಶೀಘ್ರದಲ್ಲೇ ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದೂ ಆಗ್ರಹಿಸಿದರು.
ರಾಜಕೀಯ ಕಾರಣಕ್ಕಾಗಿ ಅಧಿಕಾರದಲ್ಲಿದ್ದ ರಾಜಕೀಯ ಪಕ್ಷಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ. ಈ ರೀತಿ ಅಸಡ್ಡೆ ಮಾಡುವ ಮೂಲಕ ಪ್ರಜಾಪ್ರಭುತ್ವದ ಹೆಸರಿನಲ್ಲಿ ಜನರ ಶೋಷಿಸುತ್ತಿದೆ ಎಂದು ದೂರಿದರು.


ಚುನಾವಣೆಗೆ ಇರುವ ಅಡೆತಡೆಗಳನ್ನು ರಾಜ್ಯ ಸರ್ಕಾರವು ನಿವಾರಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿದರು.


ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲೂ ಪಕ್ಷವನ್ನು ಸಂಘಟಿಸಲಾಗುತಿತದೆ. ತಾಲೂಕುವಾರು ಘಟಕ ಸ್ಥಾಪಿಸಲಾಗುವುದು. ಇತ್ತೀಚೆಗೆ ನಗರ ಪ್ರದೇಶದೊಂದಿಗೆ ಗ್ರಾಮೀಣ ಪ್ರದೇಶದಲ್ಲೂ ನಮ್ಮ ಪಕ್ಷದ ಕುರಿತು ಜನರಿಗೆ ಒಲವು ಹೆಚ್ಚಾಗಿರುವುದು ಕಂಡು ಬಂದಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಪಕ್ಷವನ್ನು ಸಂಘಟಿಸಲಾಗುವುದು ಎಂದರು.


ಕಳೆದ ಸಲ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಈ ಮೂಲಕ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕೈ ಜೋಡಿಸಲಾಗಿತ್ತು. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net