

ಮಂಡ್ಯ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ-ಅರಸಿಕೆರೆ ನಡುವಿನ ರಾಜ್ಯಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ.
ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು ಅವರ ಮನವಿ ಮೇರೆಗೆ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಶ್ರೀರಂಗಪಟ್ಟಣ-ಕೆ.ಆರ್.ಪೇಟೆ - ಪಾಂಡವಪುರ-ಚನ್ನರಾಯಪಟ್ಟಣ-ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ರಸ್ತೆಯು ತಾಲೂಕು ಕೇಂದ್ರದಿಂದ ನಗರಗಳಿಗೆ ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದ್ದು, ಆರ್ಥಿಕವಾಗಿ ದೊಡ್ಡ ಕೊಡುಗೆಯನ್ನು ನೀಡಲಿದೆ. ಮುಖ್ಯವಾಗಿ ಈ ಭಾಗದಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೆ, ಕೃಷಿ ಉತ್ಪನ್ನಗಳಾದ ಹಾಲು, ತರಕಾರಿ ಮುಂತಾದವುಗಳನ್ನು ಗ್ರಾಮೀಣ ಪ್ರದೇಶಗಳಿಂದ ಮೈಸೂರು, ಬೆಂಗಳೂರು, ಹಾಸನ ಮತ್ತಿತರೆ ನಗರಗಳಿಗೆ ಪೂರೈಸಲು ಅನುಕೂಲವಾಗಲಿದೆ. ಜತೆಗೆ, ಶ್ರೀರಂಗಪಟ್ಟಣ, ಜಗದ್ವಿಖ್ಯಾತ ಪಕ್ಷಿಧಾಮ ರಂಗನತಿಟ್ಟು ಸೇರಿದಂತೆ ಹಲವಾರು ಪ್ರವಾಸಿ ತಾಣಗಳನ್ನು ತಲುಪಲು ಜನತೆಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಕುಮಾರಸ್ವಾಮಿ ಸಾರಿಗೆ ಸಚಿವರ ಗಮನಕ್ಕೆ ತಂದಿದ್ದಾರೆ.
ಯೋಜನೆಗೆ ಒಪ್ಪಿಗೆ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾಗೂ ಈ ಬಗ್ಗೆ ಮುತುವರ್ಜಿ ವಹಿಸಿ ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶಾಸಕ ಎಚ್.ಟಿ.ಮಂಜು ಕೃತಜ್ಞತೆ ಸಲ್ಲಿಸಿದ್ದಾರೆ.