

ರಾಯಚೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಿಗೆ ಸಂಬಂಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿರುವುದನ್ನು ಖಂಡಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳ ಜಾರಿಯನ್ನು ಸಹಿಸದೇ ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡಿದ್ದು, ಕೂಡಲೇ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪಕ್ಷದ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರಿಗೆ ಗೌರವ ನೀಡಿ ಅವರನ್ನು ಸಬಲೀಕರಣಗೊಳಿಸಲು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆದರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಯೋಜನೆಗಳಿಂದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂದು ಹೇಳಿರುವುದು ಮಹಿಳೆಯರಿಗೆ ಮಾಡಿರುವ ಅವಮಾನವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದಾಗಿ ಜನರು ಕಾಂಗ್ರೆಸ್‌ಗೆ ನೀಡುತ್ತಿರುವ ಬೆಂಬಲ ಸಹಿಸದೇ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರನ್ನು ಅವಮಾನಿಸಿ ಮಾತನಾಡಿದ್ದಾರೆ. ಮಹಿಳೆಯರು ಅವರಿಗೆ ಸರಿಯಾದ ಬುದ್ದಿ ಕಲಿಸಲಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪಕ್ಷದ ಪದಾಕಾರಿಗಳಾದ ಕೆ.ಶಾಂತಪ್ಪ, ಜಿ.ಬಸವರಾಜರೆಡ್ಡಿ, ಜಯಣ್ಣ, ರಾಜಶೇಖರ ರಾಮಸ್ವಾಮಿ, ಶಶಿಕಲಾ ಭೀಮರಾಯ, ಜಿ.ಸುರೇಶ, ರುದ್ರಪ್ಪ ಅಂಗಡಿ, ಭಾರತಿ, ಯೂಸ್ೂ ಖಾನ್, ಮಾಲಾ ಭಜಂತ್ರಿ, ನವನೀತಾ ಆದೋನಿ, ರಜೀಯಾ ಸುಲ್ತಾನಾ ಪಾಲ್ಗೊಂಡಿದ್ದರು.