

ಚಿತ್ರದುರ್ಗ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ದೈಹಿಕ-ಮಾನಸಿಕ ಆರೋಗ್ಯ ಇನ್ನಷ್ಟು ಸದೃಢವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಹೇಳಿದರು.
ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬುಧವಾರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಹಿರಿಯ ನಾಗರಿಕರು ಒಳಗೊಂಡಂತೆ ಎಲ್ಲರ ಜೀವನದಲ್ಲೂ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೆಳು ಪ್ರಮುಖ ಪಾತ್ರ ವಹಿಸಲಿವೆ. ಹೀಗಾಗಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದರು.
ಬದಲಾದ ಜೀವನ ಶೈಲಿಯಿಂದಾಗಿ ಕ್ರೀಡೆ ಅತ್ಯಂತ ಅವಶ್ಯಕವಾಗಿದೆ. ನಿತ್ಯ ಯಾವುದಾದರೊಂದು ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ಕ್ರಿಯಾಶೀಲರಾಗಿ, ಏಕಾಗ್ರತೆ ಸಾಧಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಸಂಘದ ಜಿಲ್ಲಾಧ್ಯಕ್ಷ ಆರ್.ರಂಗಪ್ಪರೆಡ್ಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಇತ್ತೀಚೆಗೆ ಹಿರಿಯ ನಾಗರಿಕರ ಯೋಗ-ಕ್ಷೇಮ ಕಾಪಾಡಲು ಬಹಳಷ್ಟು ಉತ್ತೇಜನ ನೀಡುತ್ತಿವೆ. ಆರೋಗ್ಯ ತಪಾಸಣೆ ಶಿಬಿರ, ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಮನಸ್ಸಿಗೆ ಮುದ ನೀಡುವುದರ ಜೊತೆಗೆ ಸಂತಸ ತರುತ್ತಿವೆ ಎಂದು ತಿಳಿಸಿದರು.
ಸ್ಪರ್ಧಾ ವಿಜೇತರಿಗೆ ಅ.1ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ಎಂ.ನೆಲವಗಿ, ರೋಟರಿ ಕ್ಲಬ್ ಅಧ್ಯಕ್ಷ ವಿ.ಜಿ.ಎಸ್.ಕನಕರಾಜ್, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜೆ.ವೈಶಾಲಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಿ.ಹರಿಪ್ರಸಾದ್, ಜಿಲ್ಲಾ ದೈಹಿಕ ನಿವೃತ್ತ ಶಿಕ್ಷಣಾಧಿಕಾರಿ ಎಂ.ಎಚ್.ಜಯಣ್ಣ ಇತರರಿದ್ದರು.
ಜಿಲ್ಲಾಡಳಿತ, ಜಿಪಂ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಂಘ, ರೋಟರಿ ಕ್ಲಬ್, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳಿಂದ ಸ್ಪರ್ಧೆ ಆಯೋಜಿಸಲಾಗಿತ್ತು.