ನಾಯಿ ಕಡಿತಕ್ಕೆ ಚುಚುಮದ್ದು ದಾಸ್ತಾನಿರಲಿ: ಆರೋಗ್ಯ ಇಲಾಖೆಗೆ ಡಿಸಿ ಡಾ.ಕುಮಾರ ಸೂಚನೆ

Health Department related meeting Mandya
Published on

ಮಂಡ್ಯ: ಇತ್ತೀಚೆಗೆ ನಾಯಿ ಕಡಿತಕ್ಕೊಳಗಾಗಿದ್ದ ಬಾಲಕಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಾಗದ ಕಾರಣ ಮಂಡ್ಯಕ್ಕೆ ಬರುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಅದರಂತೆ ಇನ್ನು ಮುಂದೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಸಂಬಂಧಿಸಿದ ಔಷಧ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯಲು ತೆರಳುವ ಸಂದರ್ಭದಲ್ಲಿ ಬಾಲಕಿ ಅಪಘಾತದಲ್ಲಿ ಮೃತಪಟ್ಟಿದೆ. ಒಂದು ವೇಳೆ ಬಾಲಕಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿದ್ದರೆ ಈ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಸಂಬಂಧಿಸಿದ ಚುಚ್ಚುಮದ್ದು ಸದಾ ಇರುವಂತೆ ಆಯಾ ಆರೋಗ್ಯ ಕೇಂದ್ರದ ಮುಖ್ಯಸ್ಥರು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ತುರ್ತು ಸಂದರ್ಭಗಳಲ್ಲಿ ಬೇಕಿರುವ ಔಷಧಗಳು ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಇರಬೇಕು. ಇದನ್ನು ಪರಿಶೀಲಿಸಲು ಆಯಾ ತಾಲೂಕು ಆರೋಗ್ಯಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಅವರು ನಿಗದಿತವಾಗಿ ತಮ್ಮ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು. ಒಂದೊಮ್ಮೆ ಔಷಧಗಳ ದಾಸ್ತಾನು ಕುರಿತು ಮೊಬೈಲ್ನಲ್ಲೇ ವೈದ್ಯರು ಮಾಹಿತಿ ಪಡೆಯಬಹುದು. ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಳ್ಳಿ. ಪ್ರತಿ ಜೀವವು ಅಮೂಲ್ಯ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಿ ಎಂದರು.

ಮಳೆಗಾಲ ಪ್ರಾರಂಭವಾಗಿದೆ. ಡೆಂೆ, ಮಲೇರಿಯಾ, ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಕಟ್ಟಡಗಳ ನಿರ್ಮಾಣ ಸ್ಥಳಗಳಲ್ಲಿ ಹೆಚ್ಚು ನೀರು ನಿಲ್ಲುವ ಸಾಧ್ಯತೆ ಇರುತ್ತದೆ. ಇಂತಹ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ. ಜಿಲ್ಲೆಯಲ್ಲಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಹೋಮ್ ಐಸೋಲೇಷನ್‌ನಲ್ಲಿ ಇರಿಸಲಾಗಿದೆ. ಮಿಮ್ಸ್‌ನಲ್ಲಿ ಎಸ್‌ಎಆರ್‌ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದೇ ರೀತಿ ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಾಂಕ್ರಮಿಕ ರೋಗವಲ್ಲದ ಮಧುಮೇಹ, ರಕ್ತದ ಒತ್ತಡ ಹಾಗೂ ಕ್ಯಾನ್ಸರ್ ರೋಗಗಳ ಪತ್ತೆ ಹಚ್ಚಿ ಅವರಿಗೆ ಚಿಕಿತ್ಸೆ ನೀಡಲು ಎನ್‌ಸಿಡಿ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಆದರೆ ಮಧುಮೇಹ, ರಕ್ತದ ಒತ್ತಡ ಹಾಗೂ ಕ್ಯಾನ್ಸರ್ ರೋಗಿಗಳ ಸಂಖ್ಯೆ ಎಷ್ಟು ಮತ್ತು ಅವರು ಚಿಕಿತ್ಸೆಗೆ ಒಳಪಡೆಯುತ್ತಿದ್ದಾರಾ ಎಂದು ಪರಿಶೀಲಿಸಬೇಕು. ಹೆಚ್ಚಿನ ರೋಗಿಗಳು ಇರುವ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹೆಚ್ಚು ಆಯೋಜಿಸಿ. ಜಿಲ್ಲೆಯಲ್ಲಿ ಹೃದಯಾಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತಂತೆ ವಯೋಮಿತಿವಾರು ಸಮೀಕ್ಷೆ ನಡೆಸಿ. ಹೃದಯ ವೈಶಾಲ್ಯ ಯೋಜನೆಯಡಿ ಎಷ್ಟು ಜನರ ಸ್ಕ್ರೀನಿಂಗ್ ನಡೆಯುತ್ತಿದೆ. ಹೃದಯ ಸಂಬಂಧಿ ಖಾಯಿಲೆ ಇದ್ದಲ್ಲಿ ಮುಂದಿನ ಚಿಕಿತ್ಸೆಗೆ ರೆಫರ್ ಮಾಡುತ್ತಿರುವ ಬಗ್ಗೆ ವರದಿ ನೀಡಿ ಎಂದರು. ಇದೇ ವೇಳೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ತಾಯಿ ಮರಣ ವರದಿಯನ್ನು ಪರಿಶೀಲಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ-2 ಟಿ.ಲಕ್ಷ್ಮೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ. ಮೋಹನ್, ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ, ನಿವೃತ್ತ ಡಿಎಚ್‌ಒ ಡಾ.ಟಿ.ಎನ್.ಮರೀಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net