

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕಿಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು.
ನಗರದ ಅವರ ನಿವಾಸದಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಕರ್ನಾಟಕದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 30 ಸಾವಿರ ಗುತ್ತಿಗೆ ಸಿಬ್ಬಂದಿಯ ನವೀಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ಮೌಲ್ಯಮಾಪನ ಮಾಡಿ ಮುಂದುವರಿಸುವ ಹೇಳಿಕೆ ನೀಡಿದ್ದಾರೆ. ಕಳಪೆ ಕಾರ್ಯಕ್ಷಮತೆ ಹೊಂದಿರುವ ನೌಕರರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದರಿಂದಾಗಿ ಹಲವು ದಶಕಗಳಿಂದ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತ ಬಂದಿರುವ ಗುತ್ತಿಗೆ ಸಿಬ್ಬಂದಿಗೆ ಅನ್ಯಾಯವಾಗುತ್ತದೆ. ಜೀವನೋಪಾಯ ಕಷ್ಟವಾಗುತ್ತದೆ. ಹೀಗಾಗಿ ಕಾರ್ಯಕ್ಷಮತೆ ಮೌಲ್ಯಮಾಪನದ ನೆಪದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ವಜಾಗೊಳಿಸಲು ಕಾರಣವಾಗುವ ಯಾವುದೇ ಕ್ರಮವನ್ನು ಮರು ಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಮನವಿ ಸಲ್ಲಿಸಿದರು.
ನಿರಂತರವಾಗಿ ಬದ್ಧತೆ ಮತ್ತು ಸಮಗ್ರತೆಯಿಂದ ಸೇವೆ ಮಾಡುತ್ತ ಬಂದಿದ್ದು, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ನಿರ್ವಹಣಾ ಸಿಬ್ಬಂದಿ ನವೀಕರಿಸದಿರುವುದು ರಾಜ್ಯದಲ್ಲಿ ಸಾರ್ವಜನಿಕ ಆರೋಗ್ಯ ಫಲಿತಾಂಶಗಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಬ್ಬಂದಿವಾರು ಮೌಲ್ಯಮಾಪನ ವರದಿಗಳ ಅನ್ವಯ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರ ನವೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಆರೋಗ್ಯ ಸಚಿವರಿಗೆ ಪತ್ರದ ಮುಖೇನ ಮನವಿ ಮಾಡಲಾಗಿದೆ ಎಂದು ಬೆಳಗಾವಿ ಸಂಸದರಾದ ಶೆಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.