ಒಂದು ವಾರ ಕರ್ನಾಟಕ ಬಂದ್​: ಏನು ಇರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ..

B S Yeddyurappa 1
Published on

ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ವ್ಯಾಪಿಸುತ್ತಿರುವ ಕಾರಣ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿರುವ ಸರ್ಕಾರ ಮುಂದಿನ ಒಂದು ವಾರ ಕಾಲ ಆರೋಗ್ಯ ತುರ್ತುಪರಿಸ್ಥಿತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಒಂದು ವಾರ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಿರಲಿದ್ದು, ಸಾರ್ವಜನಿಕರು ಸೇರುವಂತಹ ಕಾರ್ಯಕ್ರಮಗಳನ್ನು ನಿಷೇಧ ಹೇರಿದೆ. ಈ ವಿಷಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಕರೊನಾ ವೈರಸ್ ಸೋಂಕಿನಿಂದ ಕಲಬುರಗಿಯ ವ್ಯಕ್ತಿಯೊಬ್ಬರು ದುರದೃಷ್ಟವಶಾತ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಡಾ. ದೇವಿ ಶೆಟ್ಟಿ ಹಾಗೂ ವಿವಿಧ ವೈದ್ಯಕೀಯ ಸಂಘಟನೆಗಳೊಂದಿಗೆ ಸಭೆ ನಡೆಸಿದ ನಂತರ ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ಪ್ರಕಟಿಸಿದರು. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ ವಿಷಯಗಳ ಸಾರ ಇಲ್ಲಿದ್ದು, ನಾಳೆಯಿಂದ ಒಂದು ವಾರದ ಅವಧಿಗೆ ಏನಿರತ್ತೆ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.

ಏನಿರಲ್ಲ....

  • ರಾಜ್ಯಾದ್ಯಂತ ಮಾಲ್‍ಗಳು, ಚಿತ್ರಮಂದಿರಗಳು, ನೈಟ್ ಕ್ಲಬ್ ಕಾರ್ಯಚಟುವಟಿಕೆ
  • ಬೇಸಿಗೆ ಶಿಬಿರಗಳು, ಸಭೆ ಸಮಾರಂಭಗಳು, ಕ್ರೀಡಾಕೂಟ, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮ
  • ಶಾಲೆಗಳು, ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಒಂದು ವಾರ ಚಟುವಟಿಕೆ ಇರಲ್ಲ
  • ಮದುವೆ, ಸಭೆ, ಸಮಾರಂಭ, ಬರ್ತ್​ಡೇ ಪಾರ್ಟಿ ಮತ್ತು ಇತರೆ ಕಾರ್ಯಕ್ರಮಗಳು

ಏನಿರತ್ತೆ...

  • ಆಸ್ಪತ್ರೆ, ತುರ್ತು ಆರೋಗ್ಯ ಸೇವೆಗಳು
  • ಸಣ್ಣಪುಟ್ಟ ನಿತ್ಯೋಪಯೋಗಿ ದಿನಸಿ ಅಂಗಡಿಗಳು
  • ಕಾಲೇಜುಗಳಲ್ಲಿ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ
  • ಸರ್ಕಾರಿ ಕಚೇರಿಗಳು, ಅಧಿವೇಶನ ಅಬಾಧಿತವಾಗಿ ನಡೆಯಲಿವೆ

ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು

  • Covid19 ಸೋಂಕು ತಗುಲದೆ ಇರುವಂತೆ ಮುನ್ನೆಚ್ಚರಿಕೆ ವಹಿಸಲು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದ್ದು, ಅದನ್ನು ಅನುಸರಿಸಬೇಕು.
  • ಸೋಷಿಯಲ್ ಡಿಸ್ಟೆನ್ಸಿಂಗ್ ಅಂದರೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಿ. ಯಾರನ್ನೂ ಮುಟ್ಟಬೇಡಿ.
  • ಎಲ್ಲ ಖಾಸಗಿ ಆಸ್ಪತ್ರೆಯವರು ಈ ಸೋಂಕಿನ ಲಕ್ಷಣ ಇರುವ ರೋಗಿಗಳು ಬಂದಲ್ಲಿ ಕಡ್ಡಾಯವಾಗಿ ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಈ ಬಗ್ಗೆ ಖಾಸಗಿ ಆಸ್ಪತ್ರೆಗಳ ಸಂಘಟನೆಯವರಿಗೂ ಸೂಚನೆ ನೀಡಲಾಗಿದೆ.
  • ವಿದೇಶ ಪ್ರಯಾಣದಿಂದ ಬಂದ ಪ್ರಯಾಣಿಕರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಮತ್ತು ಅವರ ಕುಟುಂಬದವರು ಅವರು ಯಾವುದೇ ದೇಶದಿಂದ ಹಿಂದಿರುಗಿದರೂ, ಕಡ್ಡಾಯವಾಗಿ 14 ದಿನಗಳ ಕಾಲ ಅವರ ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು (ಐಸೋಲೇಷನ್).
  • ಎಲ್ಲ ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಖಾಸಗಿ ಕ್ಲಿನಿಕ್‍ನವರು ಕಳೆದ 14 ದಿನಗಳಿಂದ ವಿದೇಶದಿಂದ ಹಿಂದಿರುಗಿ ಚಿಕಿತ್ಸೆ ಪಡೆದವರು ಇದ್ದಲ್ಲಿ ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಖಾಸಗಿ ಆಸ್ಪತ್ರೆಗಳು ಎಲ್ಲ ರೀತಿಯಲ್ಲೂ ಸಹಕರಿಸಬೇಕು.
  • ಸೋಂಕು ಪರೀಕ್ಷೆಗೆ ಹೆಚ್ಚುವರಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸರ್ಕಾರದಿಂದ ಕ್ರಮ.
  • ಖಾಸಗಿ ಆಸ್ಪತ್ರೆಗಳೊಂದಿಗೆ ಸಮನ್ವಯ ವಹಿಸಲು ಒಂದು ಸಮಿತಿಯನ್ನು ಸರ್ಕಾರವೇ ರಚಿಸಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net