

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ ಮಾಹಿತಿ ನೀಡಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ವೇಕ್ಷಣಾ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಗೃಹ ಅರೋಗ್ಯ ಯೋಜನೆ ಕಾರ್ಯಗಾರ ಮತ್ತು ಜಿಲ್ಲಾದ್ಯಂತ ಗೃಹ ಅರೋಗ್ಯ ಯೋಜನೆ ವಿಸ್ತರಣೆ ಮತ್ತು ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗೃಹ ಆರೋಗ್ಯ ಯೋಜನೆ ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ನಿವಾಸಿಗಳ ಮನೆ ಬಾಗಿಲಿಗೆ ಒದಗಿಸುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಸಾಂಕ್ರಾಮಿಕವಲ್ಲದ ರೋಗಗಳ ಆರಂಭಿಕ ಪತ್ತೆ ಮತ್ತು ನಿರ್ವಹಣೆ ಹೆಚ್ಚಿಸುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿ ಈ ಯೋಜನೆ ಹೊಂದಿದೆ ಎಂದು ತಿಳಿಸಿದರು.
ಎಲ್ಲರಿಗೂ ಉಚಿತ ತಪಾಸಣೆ: ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆ ನಡೆಸಲಾಗುವುದು ಎಂದು ಸಿಇಒ ತಿಳಿಸಿದರು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನು ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನು ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಆರೋಗ್ಯ ಮಾಹಿತಿ: ಸಂಪನ್ಮೂಲ ವ್ಯಕ್ತಿಯಾಗಿ ಅಗಮಿಸಿದ್ದ ಡಾ. ಸುಷ್ಮಾ ಅವರು, ಅಸಾಂಕ್ರಾಮಿಕ ರೋಗಗಳಿಗೆ ಮನೆಗಳಿಗೆ ತೆರಳಿ ಚಿಕಿತ್ಸೆ ಹೇಗೆ ನೀಡಬೇಕು ಮತ್ತು ಅವರು ಆರೋಗ್ಯಕ್ಕಾಗಿ ಮಾಡಬೇಕಾದ ವ್ಯಾಯಾಮ, ಆಹಾರ ಪದ್ಧತಿ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಇದೊಂದು ಮಹತ್ತರ ಯೋಜನೆಯಾಗಿದ್ದು, ಗ್ರಾಮೀಣ ಜನರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕಾರೆಡ್ಡಿ ತಿಳಿಸಿದರು. ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಈ ವೇಳೆ ಸಾರ್ವಜನಿಕರು ಆಶಾಕಾರ್ಯಕರ್ತೆಯರ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಈ ಯೋಜನೆ ಜಾರಿಯಾಗಿದೆ, ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಿಗೆ ಆದ್ಯತೆ ನೀಡಿದ್ದು ಗ್ರಾಮೀಣ ಜನರ ಆರೋಗ್ಯ ರಕ್ಷಣೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.