2025ರೊಳಗೆ ಮಲೇರಿಯಾ ಮುಕ್ತ ಗುರಿ ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಹೇಳಿಕೆ

26-klr-6
Published on

ಕೋಲಾರ: ಮಲೇರಿಯಾ ಹಲವು ವರ್ಷಗಳಿಂದ ಜನರನ್ನು ಕಾಡುತ್ತಿದ್ದು, 2025ರೊಳಗೆ ರೋಗ ಮುಕ್ತಗೊಳಿಸುವ ಗುರಿ ಹೊಂದಿದ್ದೇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮುಂಜಾಗ್ರತಾ ಕ್ರಮಗಳ ಸಭೆಯಲ್ಲಿ ವಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರ್ಕಾರ ಮಲೇರಿಯಾ ನಿರ್ಮೂಲನೆಗೆ ಪಣತೊಟ್ಟಿದ್ದು, ಮಲೇರಿಯಾ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆ ಪರದೆ, ಸೊಳ್ಳೆ ಲಿಕ್ವಿಡ್, ಹೊಸ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ಸೊಳ್ಳೆಗಳಿಂದ ದೂರವಿರಲು ಯತ್ನಿಸಬೇಕು. ಮಲೇರಿಯಾ ಮುಕ್ತ ಪಡಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರೂ ಮನೆಗಳ ಸುತ್ತ ಮತ್ತು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜನರಲ್ಲಿ ಜಾಗತಿ ಮೂಡಿಸಬೇಕಿದೆ. ಕರೊನಾ 4ನೇ ಅಲೆ ಬಾರದಂತೆ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ವಾಸ್ಕ್ ಧರಿಸುವುದು, ಬೂಸ್ಟರ್ ಡೋಸ್ ತಪ್ಪದೆ ಪಡೆಯುವ ಕೆಲಸ ವಾಡಬೇಕು. 12 ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಿದ್ದು, 2ನೇ ಡೋಸ್ ಯಾರು ಪಡೆದಿಲ್ಲವೊ ಅವರು ಪಡೆದುಕೊಳ್ಳುವಂತೆ ಸೂಚಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಮಲಾ ವಾತನಾಡಿ, ಜಿಲ್ಲೆಯಲ್ಲಿ ವಲಸೆ ಬಂದಿರುವ ಕೂಲಿ ಕಾರ್ಮಿಕರಲ್ಲಿ ಮಲೇರಿಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಇದನ್ನು ನಿಯಂತ್ರಿಸಲಾಗುವುದು. ಮಲೇರಿಯಾ ನಿಯಂತ್ರಣಕ್ಕೆ 2 ಸಾವಿರ ಸೊಳ್ಳೆಪರದೆಗಳನ್ನು ಬಡವರಿಗೆ ನೀಡಲಾಗಿದೆ. ಆಶಾ ಕಾರ್ಯಕರ್ತೆಯರು ಪ್ರತಿ ಸಾವಿರ ಜನಸಂಖ್ಯೆಗೆ ಒಬ್ಬರಂತೆ ಕಾರ್ಯನಿರ್ವಹಿಸುತ್ತಿದ್ದು, ಜ್ವರದ ಪ್ರಕರಣಗಳ ರಕ್ತಲೇಪನಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಅಂಧತ್ವಾಧಿಕಾರಿ ಡಾ. ನಾರಾಯಣಸ್ವಾಮಿ ವಾತನಾಡಿ, ಸರ್ಕಾರವು ಮೇ ಮೊದಲು ಮತ್ತು 2ನೇ ವಾರದಲ್ಲಿ ನಮ್ಮ ದೃಷ್ಟಿ ನಮ್ಮ ಕರ್ನಾಟಕ ಎಂಬ ಹೊಸ ಕಾರ್ಯಕ್ರಮ ಜಾರಿಗೆ ತರಲು ಮುಂದಾಗಿದೆ. ಮುಖ್ಯವಾಗಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಪತ್ತೆ ಹಚ್ಚಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಎಂ.ಎಸ್ ರಾಮಯ್ಯ, ಶಂಕರ್ ಕಣ್ಣಿನ ಆಸ್ಪತ್ರೆ, ನಾರಾಯಣ ನೇತ್ರಾಲಯಗಳಿಗೆ ಕಳುಹಿಸಲಾಗುವುದು. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಣ್ಣಿನ ಪರೀಕ್ಷೆ ವಾಡಿಸಿಕೊಳ್ಳುವುದು ಮುಖ್ಯ. ಕಣ್ಣಿನ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವಿಸುವುದು ಉತ್ತಮ. ಟಿ.ವಿ, ಮೊಬೈಲ್‌ಗಳನ್ನು ವೀಕ್ಷಿಸುವುದನ್ನು ಆದಷ್ಟು ಕಡಿಮೆ ಮಾಡಬೇಕು ಎಂದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್, ಜಿಲ್ಲಾ ಕೀಟಶಾಸ್ತ್ರಜ್ಞ ಡಾ.ವೇಣುಗೋಪಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇವಾ, ರೇಣುಕಾ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net