ಮಕ್ಕಳಲ್ಲಿ ಅಪೌಷ್ಟಿಕತೆ ದೂರ ಮಾಡಲು ಪೋಷಕರ ಸಹಕಾರ ಅಗತ್ಯ: ಡಿಎಚ್ಒ ಡಾ. ನಾಗಭೂಷಣ ಉಡುಪ

udp-28-dho
Published on

ಉಡುಪಿ: ಜಿಲ್ಲೆಯಲ್ಲಿ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗುತ್ತಿದ್ದು, ಪೌಷ್ಟಿಕ ಆಹಾರ ನೀಡಲು 14 ದಿನಗಳ ಕಾಲ ಪೌಷ್ಟಿಕ ಕೇಂದ್ರಕ್ಕೆ ಸೇರಿಸಿ ಆರೈಕೆ ಮಾಡಲು ಪೋಷಕರು ಕೂಡ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು.

ಮಂಗಳವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಶ್ರೀಕೃಷ್ಣ ಸಭಾಂಗಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಕೆ.ಎಂ.ಸಿ. ಮಣಿಪಾಲ ಸಹಯೋಗದೊಂದಿಗೆ ಅಯೋಜಿಸಿದ್ದ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಆಪ್ತ ಸಮಾಲೋಚನಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಪೌಷ್ಟಿಕತೆ ಹೊಂದಿದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಮುಖ್ಯ ಕರ್ತವ್ಯ ಹಾಗೂ ಜವಾಬ್ದಾರಿ ಆರೋಗ್ಯ ಇಲಾಖೆಯದ್ದಾಗಿದೆ. ಜಿಲ್ಲೆಯಲ್ಲಿ ಮುಂದಿನ 3 ತಿಂಗಳಲ್ಲಿ ಅಪೌಷ್ಠಿಕತೆಯಿಂದ ಬಳಲುವ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರಿಂದ ಅಪೌಷ್ಟಿಕತೆ ಸಮಸ್ಯೆಯನ್ನು ದೂರ ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ಆರ್.ಸಿ.ಎಚ್ ಅಧಿಕಾರಿ ಡಾ.ಎಂ.ಜಿ. ರಾಮ ಮಾತನಾಡಿ, ಜಿಲ್ಲೆಯ ಮಕ್ಕಳು 1ನೇ ತರಗತಿಗೆ ಶಾಲೆಗೆ ಸೇರುವುದರ ಒಳಗೆ ಅವರಿಗೆ ಎತ್ತರ, ತೂಕ ಮತ್ತು ಅಪೌಷ್ಟಿಕತೆಯನ್ನು ಪರಿಶೀಲಿಸಬೇಕು. ಅಂತಹ ಸಮಸ್ಯೆಗಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾಗಬೇಕು ಎಂದರು.

ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕಿ ಸುವರ್ಣ ಹೆಬ್ಬಾರ್ ಆಪ್ತಸಮಾಲೋಷನೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಕುಮಾರಯ್ಯ, ನಿರೂಪಣಾಧಿಕಾರಿ ಬಿ.ಎಚ್ ಕೃಷ್ಣಪ್ಪ, ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿ, ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net