ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ 6 ಬೆಡ್‌ಗಳ ಪ್ರತ್ಯೇಕ ವಾರ್ಡ್

udp-8-dho
Published on

ಉಡುಪಿ: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿಗಾಗಿ ಆರೋಗ್ಯ ಇಲಾಖೆ ಹೆಚ್ಚಿನ ಕಾಳಜಿ ವಹಿಸಿದ್ದು, ಎಂಡೋ ಬಾಧಿತರ ಚಿಕಿತ್ಸೆಗಾಗಿ ಜಿಲ್ಲೆಯ 11 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6 ಬೆಡ್‌ಗಳ ವಿಶೇಷ ವಾರ್ಡ್ ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು.

ಬುಧವಾರ ಪತ್ರಿಕಾ ಭವನದಲ್ಲಿ ಆರೋಗ್ಯ ಅರಿವು ಕಾರ್ಯಾಗಾರದಲ್ಲಿ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಉಡುಪಿ ಜಿಲ್ಲೆಯಲ್ಲಿ ಅಗ್ರಣಿಯಾಗಿದ್ದು, ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ನಂ.1 ಸ್ಥಾನ ಪಡೆದಿದೆ. ಆದರೆ ಪಿಎಂ ಆರೋಗ್ಯ ಕಾರ್ಡ್ ವಿತರಣೆಯಲ್ಲಿ 4ನೇ ಸ್ಥಾನದಲ್ಲಿದ್ದು, ಗ್ರಾಮ ಒನ್ ಸೆಂಟರ್ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಹೆಚ್ಚಿನ ಸಂಖ್ಯೆಯ ಕಾರ್ಡ್ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ ಎಂದರು.

ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಮಾತನಾಡಿ, ಜಿಲ್ಲೆಯಲ್ಲಿ 1434 ಕ್ಷಯರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯುತ್ತಿದ್ದು, ರೋಗಿಗಳಿಗೆ ಅಗತ್ಯವಾಗಿರುವ ಪೌಷ್ಟಿಕ ಆಹಾರ ಪೂರೈಕೆಗೆ ಕೆಲವು ಸಂಘಸಂಸ್ಥೆಗಳ ನೆರವು ಪಡೆಯಲಾಗಿದೆ. 1 ವರ್ಷದಲ್ಲಿ 41 ಮಂದಿ ದಾನಿಗಳು ನೋಂದಣಿ ಮಾಡಿಕೊಂಡಿದ್ದು, 301 ರೋಗಿಗಳಿಗೆ ಪ್ರತೀ ತಿಂಗಳು ಪೌಷ್ಟಿಕಾಂಶ ಯುಕ್ತ ಆಹಾರಗಳನ್ನು ನೀಡುತ್ತಿದ್ದಾರೆ ಎಂದರು.

ಸಾಂಕ್ರಮಿಕ ರೋಗ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ಮಾತನಾಡಿ, 2012ರಲ್ಲಿ 2217 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷ 18ಕ್ಕೆ ಇಳಿಕೆಯಾಗಿದೆ. ಇದನ್ನು 2025ಕ್ಕೆ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ. ಉಡುಪಿ ನಗರದಲ್ಲೇ ಹೆಚ್ಚಿನ ಪ್ರಕರಣಗಳು ಕಂಡುಬಂದಿರುವುದರಿಂದ ವಲಸೆ ಕಾರ್ಮಿಕರಲ್ಲಿ ಜ್ವರದ ಲಕ್ಷಣ ಇರುವವರನ್ನು ಶೀಘ್ರ ಪತ್ತೆಹಚ್ಚಿ ಸ್ಕ್ರೀನಿಂಗ್ ನಡೆಸುವ ಅಗತ್ಯವಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ಅತೀ ಹೆಚ್ಚು 527 ಪ್ರಕರಣ ದಾಖಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ರಬ್ಬರ್ ಪ್ಲಾಂಟೇಶನ್, ಪೈನಾಪಲ್ ಪ್ಲಾಂಟೇಶನ್, ಅಡಿಕೆ ತೋಟಗಳಲ್ಲಿ ನೀರು ನಿಲ್ಲದಂತೆ ತಡೆಯುವುದು ಸವಾಲಿನ ಕೆಲಸವಾಗಿದೆ. ಇದರಿಂದಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ರೋಗ ಹರಡುತ್ತಿದೆ. ಈ ಬಗ್ಗೆ ಜನರು ಜಾಗೃತರಾಗುವುದು ಅಗತ್ಯ ಎಂದು ಹೇಳಿದರು.

ವಾರ್ತಾಧಿಕಾರಿ ಮಂಜುನಾಥ್ ಕಾರ್ಯಾಗಾರ ಉದ್ಘಾಟಿಸಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಎಂ.ಕೆ. ರಾಮ, ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ್ ರಾವ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಲತಾ ನಾಯಕ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಜಿಲ್ಲಾ ಸರ್ವೆಕ್ಷಣಾ ಅಧಿಕಾರಿ ಡಾ. ನಾಗರತ್ನ, ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಪ್ರೆಸ್‌ಕ್ಲಬ್ ಸಂಚಾಲಕ ಅಜಿತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net