

ಚಿಕ್ಕಬಳ್ಳಾಪುರ: ಮುಂಗಾರು ಪೂರ್ವ ಮಳೆಯ ನಡುವೆ ಸೊಳ್ಳೆಗಳ ಕಡಿತದಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಆರೋಗ್ಯ ಇಲಾಖೆಯು ಸಲಹೆ ನೀಡಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಉತ್ತಮವಾಗಿ ಮಳೆ ಬೀಳುತ್ತಿದ್ದು ಇದರ ನಡುವೆ ಎಲ್ಲೆಂದರಲ್ಲಿ ಬಿದ್ದಿರುವ ತ್ಯಾಜ್ಯ, ಕಲುಷಿತ ನೀರಿನಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಡೆಂಗ್ಯೂ, ಚಿಕುಂಗುನ್ಯಾ ಸೇರಿ ನಾನಾ ಕಾಯಿಲೆಗಳು ಕಂಡು ಬರುತ್ತಿವೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮಗಳ ಪಾಲನೆ, ಉತ್ತಮ ಸ್ವಚ್ಛತೆ ನಿರ್ವಹಣೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.
*ಆರೋಗ್ಯ ಕಾಳಜಿ ಇರಲಿ
ಡೆಂಗ್ಯೂ, ಚಿಕುನ್ ಗುನ್ಯಾ, ವಿಷಮಶೀತ ಜ್ವರ ಸೇರಿದಂತೆ ಯಾವುದೇ ಕಾಯಿಲೆಗಳ ಬಗ್ಗೆ ಆತಂಕ ಬೇಡ. ಆದರೆ, ಜಾಗೃತರಾಗಿರಬೇಕು. ಅನಾರೋಗ್ಯ ಸಮಸ್ಯೆ ಕಂಡು ಬಂದಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆದು, ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು.
ಡೆಂಗ್ಯೂ, ಚಿಕುನ್ ಗುನ್ಯಾ ಜ್ವರವು ವೈರಸ್‌ನಿಂದ ಉಂಟಾಗುವ ಖಾಯಿಲೆ. ಸೋಂಕು ಹೊಂದಿದ ಈಡೀಸ್ ಈಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ದಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮಾತ್ರ ಮನುಷ್ಯರನ್ನು ಕಚ್ಚುತ್ತವೆ. ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರನೋವು, ಮಾಂಸಖಂಡಗಳಲ್ಲಿ ಮತ್ತು ಕೀಲುಗಳಲ್ಲಿ ವಿಪರೀತ ನೋವು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ.
ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗೆ ಪ್ರಮುಖವಾಗಿ ಸೊಳ್ಳೆಗಳ ನಿಯಂತ್ರಣ ಮುಖ್ಯ. ಇದಕ್ಕೆ ಮನೆಗಳಲ್ಲಿ ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿರುವ ತೊಟ್ಟಿಗಳು, ಡ್ರಮ್‌ಗಳು, ಬ್ಯಾರಲ್, ಮಣ್ಣಿನ ಮಡಿಕೆ ಸೇರಿದಂತೆ ಇತರೆಡೆ ಶೇಖರಣೆಯಾಗುವ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.
*ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೇ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಬ್ರೂಫಿನ್ ಇಲ್ಲವೇ ಇತರೆ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳಿವೆ.
ಡಾ. ಪ್ರಕಾಶ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ, ಚಿಕ್ಕಬಳ್ಳಾಪುರ