ಶ್ರವಣದೋಷವಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ

2
Published on

ಮೈಸೂರು: ಶ್ರವಣದೋಷ ಇರುವ 1ರಿಂದ 18 ವರ್ಷದ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ರವಿ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಡಿಎಚ್‌ಒ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಿವಿ ಸೋರುವಿಕೆ ಹಾಗೂ ಹುಟ್ಟಿನಿಂದಲೂ ಕಿವುಡತನವಿರುವ ಮಕ್ಕಳಿಗೆ ಇಲಾಖೆಯಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಯಲ್ಲಿ ಪ್ರತಿ ತಿಂಗಳು ವೈದ್ಯಾಧಿಕಾರಿಗಳ ತಂಡ ಕಾರ್ಯನಿರ್ವಹಿಸಲಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಶ್ರವಣ ಶಕ್ತಿಯನ್ನು ಪರೀಕ್ಷಿಸಿ, ಕಿವಿಯ ಸೋಂಕಿಗೆ ಆರಂಭದಲ್ಲೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ತರಬೇತಿ ಹೊಂದಿರದ ವ್ಯಕ್ತಿಗಳು ಅಥವಾ ನಕಲಿ ವೈದ್ಯರಿಂದ ಕಿವಿ ಸ್ವಚ್ಛಗೊಳಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಜೋರಾದ ಶಬ್ದಗಳಿಂದ ಕಿವಿಗಳನ್ನು ರಕ್ಷಿಸಿ ಉತ್ತಮ ಆರೋಗ್ಯ ಕಾಪಾಡಿಕೊಂಡು ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಟಿ.ಅಮರ್‌ನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಸಿ.ವಿ.ವಿನೀತಾ ಸೇರಿದಂತೆ ಎನ್‌ಪಿಪಿಸಿಡಿ ಕಾರ್ಯಕ್ರಮದ ತಂಡ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net