

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಮಹಾರಾಷ್ಟ್ರ ಪಶ್ಚಿಮಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು, ಉಪ ನದಿಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಕೆಲವೆಡೆ ಕೆಳಹಂತದ ಸೇತುವೆಗಳು, ರಸ್ತೆಗಳು ಜಲಾವೃತಗೊಂಡಿವೆ.
ಎರಡು ವಾರಗಳಿಂದ ಖಾನಾಪುರ, ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ, ಮಲಪ್ರಭಾ, ಮಾರ್ಕೆಂಡೇಯ ನದಿಗಳು ತುಂಬಿ ಹರಿಯುತ್ತಿರುವುದರಿಂದ ಅಲ್ಲಲ್ಲಿ ಕೃಷಿ ಜಮೀನುಗಳಲ್ಲಿನ ಕಬ್ಬು, ಮೆಕ್ಕೆಜೋಳ ಇತರ ಬೆಳೆಗಳು ಜಲಾವೃತ್ತಗೊಂಡಿವೆ. ಹಿಡಕಲ್ ಜಲಾಶಯಕ್ಕೆ ನಿತ್ಯ 20,032 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ನದಿಗಳಲ್ಲಿ ಹಾಗೂ ಬಳ್ಳಾರಿ ನಾಲಾದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ಚಿಕ್ಕೋಡಿ ವ್ಯಾಪ್ತಿಯಲ್ಲಿ ಕೃಷ್ಣಾ, ದೂಧಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ನದಿ ದಡದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1.10 ಲಕ್ಷ ಕ್ಯೂಸೆಕ್ ನೀರು ಬರುತ್ತಿದೆ. ಮಂಗಳವಾರ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿ ದಡದಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಖಾನಾಪುರದಲ್ಲಿ 24 ಗಂಟೆಯಲ್ಲಿ 90 ಎಂಎಂ ಮಳೆಯಾಗಿದೆ. ಹಾಗಾಗಿ ಮಲಪ್ರಭಾ ನದಿ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯಕ್ಕೆ 11,639 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬೆಳಗಾವಿ ನಗರ, ಬೆಳಗಾವಿ, ಖಾನಾಪುರ, ಬೈಲಹೊಂಗಲ, ಹುಕ್ಕೇರಿ ಸೇರಿ ಇನ್ನಿತರ ತಾಲೂಕುಗಳಲ್ಲಿ ಒಂದು ವಾರದಲ್ಲಿ ಸರಾಸರಿ 120 ಎಂ.ಎಂ. ಮಳೆಯಾಗಿದೆ. ಮತ್ತೊಂದಡೆ ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ ನದಿ ನೀರಿನ ಹರಿಯುವಿಕೆ ಏರಿಕೆಯಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ ನಗರದಲ್ಲಿ ವಾರದಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮನೆ ಗೋಡೆ ಕುಸಿದು ಬೀಳುತ್ತಿದ್ದರೆ, ಮನೆಯ ಛಾವಣಿ ರಕ್ಷಣೆಗಾಗಿ ಪ್ಲಾಸ್ಟಿಕ್ ಹೊದಿಕೆಗೆ ಮೊರೆ ಹೋಗಿದ್ದಾರೆ. ಕೆಲವೆಡೆ ಚರಂಡಿಗಳ ಪ್ಲಾಸ್ಟಿಕ್, ತ್ಯಾಜ್ಯಗಳು ರಸ್ತೆ ಮೇಲೆ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಾಂಕ್ರಾಮಿಕ ರೋಗಗಳಿಗೆ ಎಡೆ ಮಾಡಿಕೊಡುತ್ತಿದೆ.