ಶುಕ್ರವಾರದಿಂದ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Vijayavani-Featured-Image
Published on

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಅಬ್ಬರಿಸುತ್ತಿದ್ದ ವರುಣಾರ್ಭಟ ಮಂಗಳವಾರ ತುಸು ತಗ್ಗಿದ್ದು, ಕೆಲವೆಡೆ ವ್ಯಾಪಕ ವರ್ಷಧಾರೆಯಾಗಿದೆ. ಶುಕ್ರವಾರದಿಂದ (ಜು.12) ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದ ಹೆಚ್ಚಿನ ಸ್ಥಳಗಳಲ್ಲಿ ಮಳೆ ಸುರಿಯಲಿದೆ. ಉತ್ತರ ಒಳನಾಡಿನಲ್ಲೂ ವ್ಯಾಪಕ ಮಳೆಯಾಗಲಿದೆ. ವಾರಾಂತ್ಯದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 3-4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.

ಮಂಗಳವಾರ ಧಾರವಾಡ ಜಿಲ್ಲೆ ನವಲಗುಂದ ತಾಲುಕಿನ ಹೆಬ್ಬಾಳ್ ಗ್ರಾಪಂ ವ್ಯಾಪ್ತಿಯಲ್ಲಿ 76 ಮಿ.ಮೀ. ಪ್ರಮಾಣದ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕುಗಳ ವಿವಿಧೆಡೆ ಹೆಚ್ಚಿನ ಪ್ರಮಾಣದ ವರ್ಷಧಾರೆಯಾಗಿದೆ. ಮಲೆನಾಡಿನ ವಿವಿಧೆಡೆ ಸಾಮಾನ್ಯ ಪ್ರಮಾಣದ ಮಳೆಯಾಗಿದೆ.

ಜಲಾಶಯಗಳಿಗೆ ಹರಿದ ನೀರು:

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಸಣ್ಣಪುಟ್ಟ ತೊರೆ, ಕಾಲುವೆಗಳಲ್ಲೂ ಹಿಂದಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಕೆಆರ್‌ಎಸ್ ಸೇರಿ ವಿವಿಧ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿದೆ. ಇವೆಲ್ಲದೆ ಪರಿಣಾಮ ಜಲಪಾತಗಳು ವರ್ಷವೈಭವವನ್ನು ನೆನಪಿಸುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net