

ಬೆಂಗಳೂರು: ಕರಾವಳಿ,ಮಲೆನಾಡು ಪ್ರದೇಶಗಳನ್ನು ಹೊರತುಪಡಿಸಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಭಾನುವಾರವೂ ಧಾರಾಕಾರವಾಗಿ ಮಳೆ ಸುರಿದಿದೆ. ಇದರ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಕಳೆದ 24 ಗಂಟೆ ಅವಧಿಯಲ್ಲಿ ಚಿಕ್ಕಬಳ್ಳಾಪುರದ ಗೌರಿಬಿದನೂರು 12, ಕಲಬುರಗಿಯ ಅಜಲಪುರ 10, ಕೊಪ್ಪಳದ ತಾವರಗೇರಾ 9, ತುಮಕೂರಿನ ಬರಗೂರು 8, ಬಾಗಲಕೋಟೆಯ ಕೆರೂರು 7, ಯಾದಗಿರಿಯ ಕೆಂಭಾವಿ 7 ಮತ್ತು ಬಾಗಲಕೋಟೆಯ ಬಿಳಗಿ 7 ಸೆಂಮೀ ವರ್ಷಧಾರೆಯಾಗಿತ್ತು.
ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಆ.11ರಂದು ಮತ್ತು ಆ.15ರಿಂದ ಮುಂದಿನ ಮುಂದಿನ 3 ದಿನ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 65 ಮಿಮೀನಿಂದ 115 ಮಿಮೀವರೆಗೆ ಮಳೆಯಾಗಲಿದೆ. ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಆ.11ರಂದು ಯೆಲ್ಲೋ ಅಲರ್ಟ್ ಇರಲಿದೆ.
ಕರಾವಳಿ ವ್ಯಾಪ್ತಿಯಲ್ಲಿ ಮುಂಗಾರು ದುರ್ಬಲವಾಗಿರುವ ಕಾರಣ ಬಿಸಿಲಿನ ವಾತಾವರಣ ಕಾಣಿಸಿಕೊಳ್ಳುತ್ತಿದೆ. ಮುಂದಿನ 4 ದಿನ ಇದೇ ವಾತಾವರಣ ಇರಲಿದೆ. ಆದರೆ, ಆ.15ರಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಇರಲಿದೆ. ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ 40 ಕಿ.ಮೀ.ವೇಗದಲ್ಲಿ ಬಿರುಗಾಳಿ ಬೀಸಲಿದೆ.