ಮಲೆನಾಡು, ಕರಾವಳಿಯಲ್ಲಿ ಮಳೆ ಬಿರುಸು: ಉಳಿದ ಜಿಲ್ಲೆಗಳಲ್ಲಿ ಕುಂಠಿತ

bhr rain
ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆಯಾಗುತ್ತಿರುವಾಗ ಕಂಡುಬಂದ ದೃಶ್ಯ.
Published on

ಬೆಂಗಳೂರು: ಮಾನ್ಸೂನ್ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಭಾವವಾದರೆ, ಕರಾವಳಿ,ಮಲೆನಾಡು ಪ್ರದೇಶಗಳಲ್ಲಿ ಬಿರುಸಾಗಿ ಸುರಿಯುತ್ತಿದೆ. ಮುಂದಿನ 5 ದಿನ ಆ ಭಾಗಗಳಲ್ಲಿ ಜೋರು ವರ್ಷಧಾರೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉತ್ತರ ಕನ್ನಡದ ಕ್ಯಾಸಲ್ ರ್ಯಾಂಕ್​​ 120 ಮಿಮೀ ಮಳೆಯಾಗಿದ್ದರೆ, ಮಂಕಿ, ಯಲ್ಲಾಪುರ, ಕೊಡಗಿನ ಭಾಗಮಂಡಲ, ಚಿಕ್ಕಮಗಳೂರಿನ ಕಮ್ಮರಡಿ, ಶೃಂಗೇರಿ ಮತ್ತು ದಕ್ಷಿಣ ಕನ್ನಡದ ಮಾಣಿಯಲ್ಲಿ 60-80 ಮಿಮೀ ಮಳೆ ಸುರಿದಿದೆ.ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.8 ರಿಂದ ಜು.12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಕರಾವಳಿ ತಟ್ಟದ ಹತ್ತಿರ ಗಂಟೆಗೆ 50-60 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಈ ಮೇಲಿನ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ,ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 4 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಮೋಡ ಮುಸುಕಿದ ವಾತಾವರಣದೊಂದಿಗೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಪ್ರತಿ ಗಂಟೆಗೆ ಗಾಳಿ ವೇಗ 40-50 ಕಿ.ಮೀ.ಇರಲಿದೆ. ಗರಿಷ್ಠ, ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿ.ಸೆ. ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net