

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಮಂಗಳವಾರವೂ ಧಾರಾಕಾರವಾಗಿ ಮಳೆ ಬಿದ್ದಿದೆ. ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್, ಕದ್ರಾ, ಬನವಾಸಿ, ಯಲ್ಲಾಪುರ, ಬೆಳಗಾವಿಯ ಖಾನಾಪುರ, ಲೋಂಡಾ, ಶಿವಮೊಗ್ಗದ ಆಗುಂಬೆ, ಕೊಡಗಿನ ಸೋಮವಾರಪೇಟೆ, ದಕ್ಷಿಣ ಕನ್ನಡದ ಧರ್ಮಸ್ಥಳ, ಚಿಕ್ಕಮಗಳೂರಿನ ಕಳಸ ಮತ್ತು ಶೃಂಗೇರಿಯಲ್ಲಿ 8-10 ಸೆಂಮೀ ಮಳೆ ಸುರಿದಿತ್ತು.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.25ರಿಂದ ಜೂ.27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 115 ಮಿಮೀ ಮಳೆಯಾಗುವ ಸಂಭವ ಇದೆ. ಅಲ್ಲದೆ, ಪ್ರತಿ ಗಂಟೆಗೆ 60 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಡಲಾಗಿದೆ.
ಬಾಗಲಕೋಟೆ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜೂ.25ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಜೂ.26ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ. ಧಾರವಾಡ, ಕೊಡಗಿನಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟ್ ಇರಲಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಮುಂದಿನ 4 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ.
ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗಂಟೆಗೆ 40-50 ಕಿ.ಮೀ.ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 21 ಡಿ.ಸೆ. ಇರಲಿದೆ.