

ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಮತ್ತು ಯೆಲ್ಲೊ ಅರ್ಲಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಹಾಗೂ ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಫಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಲು ಸಲಹೆಯಿತ್ತರು.
ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ, ಕಟ್ಟಡಗಳು ಕುಸಿದು ಸಾವು-ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಪಂ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಅರಿವು ಮೂಡಿಸಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುಣಾವಣೆ ತಹಸೀಲ್ದಾರ್ ರೇಷ್ನಾ, ತಹಸೀಲ್ದಾರಗಳಾದ ರಾಜೇಶ್ವರಿ, ವರದರಾಜು ಮತ್ತಿತರರು ಉಪಸ್ಥಿತರಿದ್ದರು.
ಸಹಾಯವಾಣಿ
ಕೆರೆ-ಕಟ್ಟೆ, ಏರಿ, ಬಂಡು, ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದ್ದಲ್ಲಿ ಮರಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಕಂಬ ಬಿದ್ದಿದ್ದಲ್ಲಿ, ಮನೆಯೊಳಗೆ ನೀರು ನುಗ್ಗಿದರೆ, ಮನೆಗೋಡೆ ಛಾವಣಿ ಬಿದ್ದರೆ, ಬೆಳೆ ನಷ್ಟ ಮತ್ತಿತರ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 0816-155304 ಅಥವಾ ವ್ಯಾಟ್ಸ ಆ್ಯಪ್ ಸಂಖ್ಯೆ: 7304975519ನ್ನು ಸಂಪರ್ಕಿಸಬಹುದು.