

Weather report: ಬೆಂಗಳೂರಿನಾದ್ಯಂತ ಗುರುವಾರ (ಅಕ್ಟೋಬರ್ 9)ರಂದು ಹಗುರದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಹಾಗೂ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) 7 ದಿನಗಳ ಹವಾಮಾನ ವರದಿಯನ್ನು ತನ್ನ X ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಬಲವಾದ ಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ" ಎಂದು ಬರೆದುಕೊಂಡಿದೆ.
ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದ್ದು, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಆರ್ದ್ರತೆಯು ಶೇ. 71 ರಷ್ಟಿರುವ ನಿರೀಕ್ಷೆಯಿದ್ದು, ವಾಯು ಗುಣಮಟ್ಟ ಸೂಚ್ಯಾಂಕ ಸುಮಾರು 49 ರಷ್ಟಿರುವ ನಿರೀಕ್ಷೆಯಿದೆ. ದಿನವಿಡೀ ಹೀಗೆ ಇರುತ್ತದೆ ಎಂದು ಮಾಹಿತಿ ನೀಡಿದೆ.
ಇಂದಿನಿಂದ ಅಕ್ಟೋಬರ್ 15ರ ವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಳೆಯೊಂದಿಗೆ ಗುಡುಗು, ಮಿಂಚು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. (ಏಜೆನ್ಸೀಸ್)