

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಜನರನ್ನು ಕಾಡುತ್ತಿದ್ದ ಹೀಟ್ ವೇವ್ ತಾಪ ಕಡಿಮೆಯಾಗುತ್ತಿದ್ದು, ಈ ವಾರಾಂತ್ಯದಿಂದ ನಾಡಿನೆಲ್ಲೆಡೆ ವರ್ಷಧಾರೆ ಸುರಿಯುವ ಹರ್ಷದ ಸುದ್ದಿ ಹೊರಬಿದ್ದಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನಿಗಿ ನಿಗಿ ಕೆಂಡವಾಗಿದ್ದ ಜಿಲ್ಲೆಗಳಲ್ಲಿ ಕ್ರಮೇಣ ಬಿಸಿಲಿನ ತಾಪ ಕಡಿಮೆಯಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಡಿಗ್ರಿ ಸೆ. ದಾಟಿದ್ದ ಉಷ್ಣಾಂಶ ಈಗ 41 ಡಿ. ಸೆ.ಗೆ ಇಳಿದಿದೆ. ಈ ಮಧ್ಯೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಗಣನೀಯವಾಗಿ ಇಳಿಕೆಯಾಗಿದ್ದು, ಮಳೆ ಮುನ್ನೆಲೆಗೆ ಬಂದಿದೆ.
ಬುಧವಾರ ಹಳೇ ಮೈಸೂರು ಭಾಗದಲ್ಲಿ ಹಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಮಂಡ್ಯ, ಹಾಸನ, ಕೊಡಗು, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ವರ್ಷಧಾರೆಯಾಗಿದೆ. ಸೋಮವಾರಪೇಟೆ ತಾಲೂಕಿನ ಕೇಡಕಲ್ ಗ್ರಾಪಂ ವ್ಯಾಪ್ತಿಯಲ್ಲಿ 40 ಮಿ.ಮೀ. ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ಸಿಂಧಗಿ ತಾಲೂಕಿನ ಕೆಲವೆಡೆ ಮಳೆಯಾಗಿದೆ.
12ರಿಂದ ಭಾರೀ ವರ್ಷಧಾರೆ:
ಮಲೆನಾಡು ಪ್ರದೇಶ ಒಳಗೊಂಡಂತೆ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮೇ 12ರಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಮೇ 13ರಿಂದ ಕರಾವಳಿ ಸೇರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರಿಂದ ಇದೇ ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ನಾಡಿನೆಲ್ಲೆಡೆ ಆವರಿಸಿಕೊಳ್ಳುತ್ತಿರುವುದು ಬರದ ತೀವ್ರತೆ ತುಸು ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಗುಡುಗು ಸಹಿತ ಮಳೆ ಸಾಧ್ಯತೆ:
ಗುರುವಾರ ದಕ್ಷಿಣ ಒಳನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯಂದಿಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯಂದಿಗೆ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೇದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಕೆಲವೆಡೆ ಹಗುರವಾದ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.