

ಬೇಲೂರು: ಆಗಸ್ಟ್ 15ರಂದು ನಡೆಯುವ 79ನೇ ಸ್ವಾತಂತ್ರೃ ದಿನವನ್ನು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
79ನೇ ಸ್ವಾತಂತ್ರೃ ದಿನಾಚರಣೆ ಅಂಗವಾಗಿ ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರೃ ದಿನಾಚರಣೆ, ಗಣರಾಜ್ಯೋತ್ಸವ ಮತ್ತು ಕನ್ನಡ ರಾಜ್ಯೋತ್ಸವಗಳನ್ನು ಹಬ್ಬದ ರೀತಿಯಲ್ಲಿ ಸಂಭ್ರಮ ಸಡಗರದಿಂದ ಆಚರಿಸಬೇಕೆಂಬೂದು ನಮ್ಮ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ 2023ರಿಂದ ರಾಷ್ಟ್ರೀಯ ಹಬ್ಬಗಳ ಆಚರಣೆಗಳು ವಿಭಿನ್ನವಾಗಿ ನಡೆಯುತ್ತಿವೆ. ಅಲ್ಲದೆ ಇದೇ ತಿಂಗಳು 15ರಂದು ನಡೆಯಲಿರುವ ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಶಿಕ್ಷಣ ಇಲಾಖೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಹಾಗೂ ಪುರಸಭೆಯವರು ಜೂನಿಯರ್ ಕಾಲೇಜು ಮೈದಾನವನ್ನು ಸ್ವಚ್ಛಗೊಳಿಸಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವುದಕ್ಕೆ ಸಹಕಾರ ನೀಡಬೇಕು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುವುದು. ಜತೆಗೆ ಸರ್ಕಾರಿ ಕಚೇರಿಗಳಲ್ಲಿ ಅಂದು ಬೆಳಗ್ಗೆ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಿ ತಾಲೂಕು ಆಡಳಿತದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಇಲ್ಲದಿದ್ದಲ್ಲಿ ನೋಟಿಸ್ ನೀಡಲಾಗುವುದು. ಮತ್ತು ಪೂರ್ವಭಾವಿ ಸಭೆಗೆ ಗೈರಾಗಿ ಸಹಾಯಕರು ಮತ್ತು ಡಿ ಗ್ರೂಪ್ ನೌಕರರನ್ನು ಕಳುಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆ ವಹಿಸಿಕೊಳ್ಳಬೇಕು ಎಂದರು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾತನಾಡಿ, ಈ ಭಾರಿ ನಡೆಯುವ ಸ್ವಾತಂತ್ರೃದಿನಾಚರಣೆಯ ವೇದಿಕೆಯಲ್ಲಿ ಶಿಷ್ಟಾಚಾರ ಅನುಸರಿಸಲಾಗುತ್ತದೆ. ರಾಷ್ಟ್ರೀಯ ಹಬ್ಬಗಳ ವತಿಯಿಂದ ನಡೆಯುವ ಸ್ವಾತಂತ್ರೃ ದಿನಾಚರಣೆಯ ಸಿದ್ಧತೆ ಬಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಮತ್ತು ಕಡ್ಡಾಯವಾಗಿ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ, ಲೋಕೋಪಯೋಗಿ ಇಲಾಖೆ ಎಇಇ ಕೃಷ್ಣೇಗೌಡ, ಜಾನಪದ ಪರಿಷತ್ತು ತಾಲೂಕು ಅಧ್ಯಕ್ಷ ಸಿದ್ದೇಗೌಡ, ಕಸಾಪ ತಾಲೂಕು ಅಧ್ಯಕ್ಷ ಮಾ.ನ.ಮಂಜೇಗೌಡ, ಶರಣ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಇತರರಿದ್ದರು.