

ಯಳಂದೂರು: ಸಾರ್ವಜನಿಕರು ತಮ್ಮ ಮನೆಯಲ್ಲಿ ನಿತ್ಯ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವಾಗಿ ಬೇರ್ಪಡಿಸಿ ಅದನ್ನು ಸಂಬಂಧಪಟ್ಟ ಪಂಚಾಯಿತಿಯ ವಾಹನಕ್ಕೆ ನೀಡಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಕರೆ ನೀಡಿದರು.
ಶನಿವಾರ ತಾಲೂಕಿನ ಅಂಬಳೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣಗೊಂಡಿರುವ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿ ಮಾತನಾಡಿ, ತ್ಯಾಜ್ಯ ನಿರ್ವಹಣೆ ಇಂದು ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ಜಗತ್ತನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಗಳಲ್ಲ ಇದು ಒಂದಾಗಿದೆ. ಇದನ್ನು ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಆದರೆ ಪ್ರತಿಯೊಬ್ಬ ಪ್ರಜೆಯೂ ಈ ಬಗ್ಗೆ ಜಾಗೃತನಾದರೆ ಈ ಸಮಸ್ಯೆಗೆ ಪರಿಹಾರ ಸುಲಭವಾಗುತ್ತದೆ. ಮನೆಯಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ಕಸವನ್ನು ಹಸಿ ಹಾಗೂ ಒಣ ಕಸವಾಗಿ ಬೇರ್ಪಡಿಸಿ ಪಂಚಾಯಿತಿ ವಾಹನಕ್ಕೆ ನೀಡಬೇಕು. ಪಂಚಾಯಿತಿ ಸಿಬ್ಬಂದಿ ಸಹ ಪ್ರತಿನಿತ್ಯ ಇದನ್ನು ಸಂಗ್ರಹಿಸಿ ಬೇರ್ಪಡಿಸಿ ಗೊಬ್ಬರವಾಗಿ ಪರಿವರ್ತಿಸಿ ಲಾಭ ಗಳಿಸುವ ಅವಕಾಶವೂ ಇರುವುದರಿಂದ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಅಂಬಳೆ ಗ್ರಾಮ ಪಂಚಾಯಿತಿ ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಇಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಉತ್ತಮ ಕೆಲಸಗಳು ಆಗಿವೆ. ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸುವುದೂ ಸೇರಿದಂತೆ ರಸ್ತೆ, ಚರಂಡಿ ಇತರ ಕೆಲಸಗಳಿಗೆ ಇಲ್ಲಿನ ನಾಗರಿಕರು ಬೇಡಿಕೆ ಇಟ್ಟಿದ್ದಾರೆ. ಇದರ ಅಂದಾಜು ವೆಚ್ಚ 93 ಲಕ್ಷ ರೂ. ಆಗಲಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಅನುದಾನ ಕೊಡಿಸಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಇಒ ಉಮೇಶ್, ಕೆಆರ್‌ಐಡಿಎಲ್‌ನ ಎಇಇ ಚಿಕ್ಕಲಿಂಗಯ್ಯ ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ಚಂದ್ರು, ಪಿಡಿಒ ಮಮತಾ, ಕಾರ್ಯದರ್ಶಿ ಪುಟ್ಟರಾಜು ಇತರರು ಇದ್ದರು.