

ಕುಶಾಲನಗರ: ದೇಶದ ಪ್ರತಿಯೊಂದು ಬಡ ಕುಟುಂಬವೂ ಆರೋಗ್ಯವಂತ ಕುಟುಂಬವಾಗುವ ನಿಟ್ಟಿನಲ್ಲಿ ಮತ್ತು ಹಣದ ಅಭಾವವನ್ನು ಎದುರಿಸುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಆಯುಷ್ಮಾನ್‌ಭವ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿಯೊಬ್ಬ ರೋಗಿ ಯಾವುದೇ ಖರ್ಚಿಲ್ಲದೆ ಎಲ್ಲ ತರಹದ ಕಾಯಿಲೆಗಳ ತಪಾಸಣೆ ಮತ್ತು ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಧುಸೂದನ್ ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಮಂಗಳವಾರ ಆಯುಷ್ಮಾನ್‌ಭವ ಆರೋಗ್ಯ ಕರ್ನಾಟಕದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಇಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಇನ್ನಷ್ಟು ಜನಪರ ಯೋಜನೆ ಜಾರಿಯಾಗಲು ಯೋಚಿಸುವಂತೆ ಆಗಬೇಕೆಂದು ಆಶಯ ವ್ಯಕ್ತಪಡಿಸಿದರು.
ಕೊಡಗು ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ರಾಮಚಂದ್ರ ಕಾಮತ್ ಮಾತನಾಡಿ, ಆಯುಷ್ಮಾನ್‌ಭವ ಆರೋಗ್ಯ ಕರ್ನಾಟಕ ಸೇವೆಯು ವೈದ್ಯಕೀಯ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿವಿಧ ಮಾದರಿಯ ಕಾಯಿಲೆಗಳ ತಪಾಸಣೆ ಮಾಡಲಾಗುತ್ತಿದ್ದು ಮರಣೋತ್ತರ ಅಂಗಾಂಗ ದಾನ, ನೇತ್ರದಾನ ನೋಂದಣಿ ಕೂಡ ಮಾಡಲಾಗುತ್ತಿದೆ. ಇಲ್ಲಿ ತಪಾಸಣೆಗೆ ಒಳಪಡುವ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದರೆ ಜಿಲ್ಲಾಸ್ಪತ್ರೆಯಲ್ಲಿ ನೆರವೇರಿಸಲಾಗುವುದು. ಪ್ರತಿಯೊಬ್ಬರೂ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ, ಸಮುದಾಯ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಪ್ರಭಾರ ತಾಲೂಕು ವೈದ್ಯಾಧಿಕಾರಿ ಡಾ.ಇಂದೂಧರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ವೈದ್ಯರಾದ ಡಾ.ಶಿವಕುಮಾರ್, ಡಾ.ಪ್ರಾಣೇಶ್ ಡಾ.ಅಂಜಲಿ ಸೇರಿದಂತೆ ಆಶಾ ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು.