

ಗಂಡಸಿ: ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಯೋಗ ಏಕೈಕ ವಿಧಾನ ಎಂದು ಗಂಡಸಿ ಶಂಭುಲಿಂಗೇಶ್ವರ ಆಂಗ್ಲ ಮಾಧ್ಯಮ ಹೈಸ್ಕೂಲ್ (ಬಿಜಿಎಸ್) ಮುಖ್ಯಶಿಕ್ಷಕಿ ಆಶಾರಾಣಿ ತಿಳಿಸಿದರು.
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶುಕ್ರವಾರ ಶಂಭುಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮೈದಾನದಲ್ಲಿ ಏರ್ಪಡಿಸಿದ್ದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಮೇರುನಟ ಡಾ.ರಾಜಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಂತಹ ಮಹಾನ್ ವ್ಯಕ್ತಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಂಡು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಯೋಗವೇ ಆರೋಗ್ಯಕ್ಕೆ ಮದ್ದು ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ತಿಳಿದು ತಮ್ಮ ಕುಟುಂಬದ ಸದಸ್ಯರಿಗೂ ಯೋಗಾಭ್ಯಾಸ ಮಾಡಲು ಸಂದೇಶವನ್ನು ಸಾರಬೇಕು ಎಂದರು.
ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಿ.ಎನ್.ದೇವೇಗೌಡ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿ, ಶಿಕ್ಷಕರು, ಶಾಲಾ ಸಿಬ್ಬಂದಿ ಇದ್ದರು.