ಎರಡನೇ ಸುಗ್ರೀವಾಜ್ಞೆ ಪ್ರಶ್ನಿಸಿ ತಿದ್ದುಪಡಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Highcourt
Published on

ಬೆಂಗಳೂರು: ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರ 2ನೇ ಬಾರಿ ಹೊರಡಿಸಿರುವ ಸುಗ್ರೀವಾಜ್ಞೆಯನ್ನೂ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಸರ್ಕಾರ ಕಳೆದ ಜುಲೈನಲ್ಲಿ ಮೊದಲ ಬಾರಿಗೆ ಹೊರಡಿಸಿದ್ದ ಸುಗ್ರೀವಾಜ್ಞೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದ ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಸಾಮಾಜಿಕ ಹೋರಾಟಗಾರ ನಾಗರಾಜ ಶೇಷಪ್ಪ ಹೊಂಗಲ್, ಎರಡನೇ ಬಾರಿಯ ಸುಗ್ರೀವಾಜ್ಞೆ ಪ್ರಶ್ನಿಸಿ ತಿದ್ದುಪಡಿ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ತಿದ್ದುಪಡಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಡಿ.1ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.
ಇದೇ ವೇಳೆ, ಮೊದಲ ಸುಗ್ರೀವಾಜ್ಞೆ ಪ್ರಶ್ನಿಸಿ ಮತ್ತೊಂದು ಪಿಐಎಲ್ ಸಲ್ಲಿಸಿದ್ದ ಬೆಂಗಳೂರಿನ ವಕೀಲೆ ಗೀತಾ ಮಿಶ್ರಾ ಅವರಿಗೂ ತಿದ್ದುಪಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ಪೀಠ, ವಿಚಾರಣೆಯನ್ನು ಡಿ.2ಕ್ಕೆ ಮುಂದೂಡಿತು.

ಪ್ರಕರಣವೇನು?: ಕರ್ನಾಟಕ ಭೂ ಸುಧಾರಣಾ ಕಾಯ್ದೆ-1961ಕ್ಕೆ ತಿದ್ದುಪಡಿ ತಂದು 2020ರ ಜುಲೈನಲ್ಲಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಆದರೆ, ವಿಧಾನ ಪರಿಷತ್‌ನಲ್ಲಿ ತಿದ್ದುಪಡಿ ವಿಧೇಯಕ್ಕೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಎರಡನೇ ಬಾರಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಅದನ್ನು ಪ್ರಶ್ನಿಸಿರುವ ಅರ್ಜಿದಾರರು, ಎರಡನೇ ಸುಗ್ರೀವಾಜ್ಞೆಯಲ್ಲೂ ಖಾಸಗಿ ಕಂಪೆನಿಗಳು, ಟ್ರಸ್ಟ್‌ಗಳು ಖರೀದಿಸುವ ಜಮೀನಿನ ಪ್ರಮಾಣಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಇದು ಪರೋಕ್ಷವಾಗಿ ಜಮೀನು ಕಬಳಿಕೆಯನ್ನು ಉತ್ತೇಜಿಸುತ್ತದೆ. ತಿದ್ದುಪಡಿ ನಿಯಮವು ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆ ತಂದಿದೆ ಎಂದು ಆಕ್ಷೇಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net