

ರಾಯಚೂರು: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು, ಸ್ಥಳೀಯ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದಿದ್ದರಿಂದ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಸ್ಥಳೀಯ ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜಿನಲ್ಲಿ ಬುಧವಾರ ವಿದ್ಯಾರ್ಥಿನಿಯರು ಹಿಜಾಬ್‌ಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರಿಂದ, ನಗರದ ಬಹುತೇಕ ಕಾಲೇಜುಗಳಲ್ಲಿ ಗುರುವಾರ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಕಾಲೇಜು ಮುಂಭಾಗಗಳಲ್ಲಿ ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ ಎಂದು ಪೋಸ್ಟರ್ ಅಂಟಿಸಲಾಗಿದ್ದು, ಹೀಗಾಗಿ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ನೇರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ, ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರ್‌ಗೆ ಮನವಿ ಸಲ್ಲಿಸಿದರು. ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ನಿಷೇಧ ಆದೇಶ ಹಿಂಪಡೆಯಬೇಕು. ಮುಸ್ಲಿಂ ಧಾರ್ಮಿಕ ಆಚರಣೆಯಂತೆ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಒಬ್ಬ ವಿದ್ಯಾರ್ಥಿನಿ ಹಾಜರು
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದಿಂದಾಗಿ ಬಹುತೇಕ ವಿದ್ಯಾರ್ಥಿನಿಯರು ತರಗತಿಗೆ ಗೈರು ಹಾಜರಾಗಿದ್ದರು. ಕಾಲೇಜಿನಲ್ಲಿ 650 ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದು, ಬುಧವಾರ ಕೇವಲ ಐದಾರು ಮಂದಿ ಹಾಜರಾದರೆ, ಗುರುವಾರ ಗೌರಮ್ಮ ಎಂಬ ಒಬ್ಬ ವಿದ್ಯಾರ್ಥಿನಿ ಮಾತ್ರ ಹಾಜರಾಗಿದ್ದರು. ಕಾಲೇಜು ಉಪನ್ಯಾಸಕರು, ಸಿಬ್ಬಂದಿ ವಿದ್ಯಾರ್ಥಿನಿಯರಿಗೆ ನ್ಯಾಯಾಲಯ ಆದೇಶದ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರೂ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಿದರೆ ಮಾತ್ರ ಕಾಲೇಜಿಗೆ ಹಾಜರಾಗುವುದಾಗಿ ಪಟ್ಟು ಹಿಡಿದಿರುವುದರಿಂದ ಉಳಿದ ವಿದ್ಯಾರ್ಥಿನಿಯರ ಅಭ್ಯಾಸಕ್ಕೂ ಅಡ್ಡಿಯುಂಟಾಗುವಂತಾಗಿದೆ.