

ಹಿರೀಸಾವೆ : ಮದ್ಯಪಾನ ಹಾಗೂ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಬೇಕು ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ತೋಟಿ ಜಯರಾಮ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಚಿಕ್ಕ ವಯಸ್ಸಿನಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳಸಿಕೊಳ್ಳವ ಬಗ್ಗೆ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಆಗುವ ಪರಿಣಾಮಗಳ ಬಗ್ಗೆ ಹಿರಿಯರು ತಿಳಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಉಮೇಶ್ ಮಾತನಾಡಿ, ಮದ್ಯ ಸೇವನೆಯಿಂದ ಮನುಷ್ಯನ ದೇಹದ ನರಮಂಡಲ, ಜಠರ, ಯಕೃತ್ತು ಹಾಗೂ ಕರುಳುಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಆರೋಗ್ಯ ಬೇಗ ಹದಗೆಡಲಿದೆ. ಮದ್ಯ ವ್ಯಸನಿಯಾದ ವ್ಯಕ್ತಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದೆ ಎಂದು ತಿಳಿಸಿದರು.