

ಹಿರಿಯೂರು: ತಳಮಟ್ಟದಿಂದ ಪಕ್ಷ ಸಂಘಟಿಸಿ ರಾಜ್ಯ-ಕೇಂದ್ರದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಪಕ್ಷದ ಎಲ್ಲ ಮುಖಂಡರು ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದರು.
ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಮಂಗಳವಾರ ಹಿರಿಯೂರಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಚರ್ಚಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಜಾತ್ಯತೀತ ತತ್ವವೇ ಜೀವಾಳ. ನಿಷ್ಠಾವಂತ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಜನರ ಪ್ರೀತಿ-ವಿಶ್ವಾಸ ಗಳಿಸಬೇಕು. ವಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಪಕ್ಷ ಬಲಿಷ್ಠವಾಗಿದ್ದು, ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರ ಗದ್ದುಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಡುಗೊಲ್ಲರಿಗೆ ಅವಕಾಶ ನೀಡಿ: ಚಿತ್ರದುರ್ಗ ಜಿಲ್ಲೆಯಲ್ಲಿ ಕಾಡುಗೊಲ್ಲರು ಹೆಚ್ಚಿನ ಸಂಖ್ಯೆಯಲ್ಲಿದ್ದು ಜಿಪಂ ಸದಸ್ಯ ಪಾಪಣ್ಣ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಮುಖಂಡರು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಸದಸ್ಯರಾದ ಆರ್.ನಾಗೇಂದ್ರನಾಯ್ಕ, ಗೀತಾ, ಪಾಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಲ್ಲಹಟ್ಟಿ ತಿಪ್ಪೇಸ್ವಾಮಿ, ಪಿ.ಎಸ್.ಸಾದತ್‌ವುಲ್ಲಾ, ಜಿ.ದಾದಾಪೀರ್, ತಾಪಂ ಸದಸ್ಯರಾದ ಮುಕುಂದ್, ಅಪ್ಪಾಜಿ, ತಿಪ್ಪಮ್ಮ ಇದ್ದರು.