

ಬೆಂಗಳೂರು: ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ "ಸ್ಪೋರ್ಟ್ಸ್ ಸಿಟಿ" ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಭರವಸೆ ನೀಡಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ 2023ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾ ಅಭ್ಯಾಸ ನಡೆಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದು ಕೊಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದರು.
ಆಸ್ಟ್ರೇಲಿಯಾ, ಅಮೆರಿಕ, ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ.ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದರು.