ಪತ್ರಕರ್ತರಿಂದ ಜಿಲ್ಲೆಗೆ ಹೆಮ್ಮೆ ತರುವ ಕಾರ್ಯ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶ್ಲಾಘನೆ

mng-24july-d c sanmana
Published on



ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯ ನೆಲೆಯಲ್ಲಿ ಸಹಕರಿಸಿದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಸನ್ಮಾನಿಸಿದರು.
ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಮಂಗಳೂರಿನ
ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್. ಯು.ಆರ್., ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಗಮನಿಸಿದ ಜಿಲ್ಲಾಧಿಕಾರಿ ಅವರು ಪತ್ರಕರ್ತರನ್ನು ತಮ್ಮ ಕಚೇರಿಗೆ ಆಹ್ವಾನಿಸಿ ಗೌರವಿಸಿದರು.
ಮಂಗಳೂರಿನ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಜಿಲ್ಲಾಧಿಕಾರಿ ಅವರು ಈ ಸಂದರ್ಭ ಶ್ಲಾಘಿಸಿದರು.
ಜಿಲ್ಲಾ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ,ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್. ಎನ್. ಕೊಣಾಜೆ, ಗಣೇಶ್ ತಲಪಾಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net