

ಬೆಳಗಾವಿ: ಭೀಕರ ಅಪಘಾತವೊಂದರಲ್ಲಿ ತಂದೆ-ಮಗಳು ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ತಾಯಿಯ ಪರಿಸ್ಥಿತಿ ಗಂಭೀರವಾಗಿದ್ದು, ಚಿಂತಾಜನಕವಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮದ ಮಡಿವಾಳಯ್ಯ ಮಲ್ಲಯ್ಯ ಕಲ್ಮಠ (33), ಪುತ್ರಿ ತನುಶ್ರೀ (3) ಸ್ಥಳದಲ್ಲೇ ಸಾವಿಗೀಡಾಗಿದರು. ಪತ್ನಿ ಭಾಗ್ಯಶ್ರೀ (28) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಪುತ್ರಿ ಹಾಗೂ ಪತ್ನಿಯನ್ನು ಕರೆದುಕೊಂಡು ಬೈಕ್ನಲ್ಲಿ ಹೋಗುತ್ತಿದ್ದ ಮಡಿವಾಳಯ್ಯ ಮಲ್ಲಯ್ಯ ಕಲ್ಮಠ ಅವರ ಬೈಕ್, ಮಾರ್ಗದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.