

ಬೆಂಗಳೂರು: ರಾಜಧಾನಿಯ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಪವನ್ ಕುಮಾರ್ ಜೈನ್ ಎಂದು ತಿಳಿದುಬಂದಿದೆ.
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಅದರ ಬಂಪರ್ ಕಿತ್ತು ರಸ್ತೆಯ ಬದಿಗೆ ಹೋಗಿ ಬಿದ್ದಿದೆ. ಈ ಕಾರು ದಾಸರಹಳ್ಳಿಯಿಂದ ಕೃಷ್ಣಗಿರಿ ಕಡೆಗೆ ಸಾಗುತ್ತಿತ್ತು.
ಪವನ್ ಕುಮಾರ್ ಜೈನ್ ಎಂಬವರು ಕುಟುಂಬಸ್ಥರೊಂದಿಗೆ ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿಯಾದ ವೇಗದಲ್ಲಿ ಇದ್ದಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ