ನ್ಯಾ.ನಾಗಮೋಹನದಾಸ್ ಆಯೋಗದ ವರದಿ ಜಾರಿಗೊಳಿಸಿ: ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

18102021 Hosapete Protest
Published on


ಹೊಸಪೇಟೆ: ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಹೆಚ್ಚಳ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ, ಜಾರಿ ಮಾಡಬೇಕೆಂದು ಒತ್ತಾಯಿಸಿ ತಹಸಿಲ್ ಕಚೇರಿ ಎದುರು ದಲಿತ ಹಕ್ಕುಗಳ ಜನಪರ ಸಂಘಟನೆಗಳ ಒಕ್ಕೂಟ ಸೋಮವಾರ ಪ್ರತಿಭಟನೆ ನಡೆಸಿತು.

ದಲಿತ ಸಮುದಾಯಗಳಿಗೆ ಕನಿಷ್ಠ ಶಿಕ್ಷಣ, ಉದ್ಯೋಗ, ಭೂಮಿ, ಆರೋಗ್ಯ, ವಸತಿ ಸೌಲಭ್ಯಗಳೂ ಸಂಪೂರ್ಣವಾಗಿ ದೊರೆತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಎಸ್ಟಿ ಮೀಸಲಾತಿ ಶೇ.7.5ಕ್ಕೆ, ಎಸ್ಸಿ ಮೀಸಲನ್ನು ಶೇ.18ಕ್ಕೆ ಹೆಚ್ಚಿಸಬೇಕೆಂಬ 35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸ್ಪಂದನೆ ಇಲ್ಲವಾಗಿದೆ. ಎಸ್ಸಿ, ಎಸ್ಟಿ, ಬ್ಯಾಕ್‌ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಬೇಕು. ಅಲ್ಲಿವರೆಗೆ ಮಾಸಿಕ 10 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.75 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯು ಪ್ರತಿ ತಾಲೂಕಿನಲ್ಲಿ ತಾಲೂಕು ಅಧಿಕಾರಿಯನ್ನು ನೇಮಿಸಬೇಕು. ಅರಣ್ಯ ಭೂಮಿ, ಸರ್ಕಾರಿ ಭೂಮಿಗಳಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಾ ಕೊಡಬೇಕು ಎಂದು ಒತ್ತಾಯಿಸಿದರು.

ಕನ್ನಡ ವಿವಿ ದೂರ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಚಿನ್ನಸ್ವಾಮಿ ಸೋಸಲೆ, ಸಂಘಟನೆಯ ಶಿವಕುಮಾರ್, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಶಿವಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳು ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net