

ಹೊಸಪೇಟೆ: ಶಕ್ತಿ ಯೋಜನೆಯಡಿ ರಾಜ್ಯಾದ್ಯಾಂತ 500 ಕೋಟಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವುದು ಸ್ತ್ರೀ ಸ್ವಾವಲಂಬಿ ಕನಸುಗಳನ್ನು ನನಸಾಗಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸೋಮವಾರ ನಡೆದ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಟಿಕೆಟ್‌ಗಳನ್ನು ವಿತರಿಸಿದ ಸಂಭ್ರಮಾಚಾರಣೆಯಲ್ಲಿ ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಯಲ್ಲಿ ಪ್ರಮುಖವಾಗಿ ಮಹಿಳೆಯರನ್ನು ಕೇಂದ್ರವಾಗಿಸಿ ಉಚಿತವಾಗಿ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಯೋಜನೆ ಎರಡು ವರ್ಷ ಯಶಸ್ವಿಯಾಗಿ ಪೂರೈಸಿದೆ. ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಟ್ಟು 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಒಟ್ಟು 12,669 ಕೋಟಿ ರೂ. ಶಕ್ತಿ ಯೋಜನೆಗೆ ಬಳಕೆಯಾಗಿದೆ. ಸಾರಿಗೆ ಇಲಾಖೆಗೆ ಪರೋಕ್ಷವಾಗಿ ಶಕ್ತಿ ನೀಡಿದ ಯೋಜನೆ ಇದಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಒಟ್ಟು 7.28 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ ಶುಲ್ಕ ಭರಿಸುವ ಮೂಲಕ ಯೋಜನೆಯನ್ನು ಸಕ್ರಿಯವಾಗಿಸಿದೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಶಕ್ತಿ ಯೋಜನೆ ಮುಖ್ಯವಾಗಿದೆ. ಪಂಚ ಗ್ಯಾರಂಟಿಗಳನ್ನು ಸಮಪರ್ಕವಾಗಿ ಜನರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಶಕ್ತಿ ಯೋಜನೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಿ ಮಹಿಳೆಯರು ಸೇರಿದಂತೆ ವಯೋವೃದ್ಧರು, ಬಡಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮೂಲಕ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ ಎಂದರು.
ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಸಾರಿಗೆ ನಿಗಮದ ವಿಭಾಗಿಯ ನಿಯಾಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ, ವಿಭಾಗೀಯ ತಾಂತ್ರಿಕ ಅಧಿಕಾರಿ ಜಿ.ನಾಗರಾಜ ಇತರರಿದ್ದರು.