ಡೆಂಘೆ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ

news
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಹಾಗೂ ಮುಂಜಾಗ್ರತಾ ಕ್ರಮದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿದರು.
Published on

ಹೊಸಪೇಟೆ: ಜಿಲ್ಲೆಯಲ್ಲಿ ಡೆಂಘೆ ಮತ್ತು ಚಿಕೂನ್ ಗುನ್ಯ ಪ್ರಕರಣಗಳು ಹೆಚ್ಚದಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಹಾಗೂ ಮುಂಜಾಗ್ರತಾ ಕ್ರಮಕ್ಕಾಗಿ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.

ಸೊಳ್ಳೆ ಕಚ್ಚುವುದರಿಂದ ಡೆಂಘೆ ಹರಡುತ್ತಿದ್ದು, ಸೊಳ್ಳೆಪ್ರತಿಬಂಧಕಗಳನ್ನು ಹೆಚ್ಚಿಗೆ ಬಳಸಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ವ್ಯಾಪಕವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಕೂಡಲೇ ವಿವಿಧ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಇದು ಒಬ್ಬರಿಂದ ಆಗುವ ಕಾರ್ಯವಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವಾಗಿ ಕಾರ್ಯನಿರ್ವಹಿಸಬೇಕು. ತಂಡಗಳಾಗಿ ನಗರಗಳಲ್ಲಿನ ಮನೆಮನೆಗೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವಂತೆ ನೋಡಿಕೊಳ್ಳಬೇಕು. ನೀರು ನಿಂತಿರುವ ಸ್ಥಳಗಳಲ್ಲಿ ಲಾರ್ವಗಳು ಉತ್ಪತ್ತಿ ಆಗುವುದು ಸಾಮಾನ್ಯ. ಅಂತಹ ಸ್ಥಳಗಳನ್ನು ಗುರುತಿಸಿ ಕೆಮಿಕಲ್ ಸಿಂಪಡಿಸಿ ಅದನ್ನು ನಾಶಪಡಿಸುವ ಕಾರ್ಯ ನಡೆಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.

ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮನೋಹರ, ಡಿಎಚ್‌ಒ ಡಾ.ಶಂಕರ್ ನಾಯಕ, ಆರ್.ಸಿ.ಎಚ್. ಡಾ.ಜಂಬಯ್ಯ, ತಂಬಾಕು ನಿಯಂತ್ರಣ ಕೋಶಾಧಿಕಾರಿ ಡಾ.ಬಿ.ಷಣ್ಮುಖ ನಾಯ್ಕ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ನಗರಾಭಿವೃದ್ಧಿ ಕೋಶದ ವ್ಯವಸ್ಥಾಪಕ ಹನುಮಂತಪ್ಪ, ವೈದ್ಯಾಧಿಕಾರಿಗಳಾದ ಡಾ.ವಿನಯ್, ಡಾ.ಜಗದೀಶ್ ಪಾಟ್ನಿ, ಡಾ.ರಾಧಿಕಾ, ಡಾ.ಭಾಸ್ಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net