

ಹೊಸಪೇಟೆ: ಜಿಲ್ಲೆಯು ಐತಿಹಾಸಿಕ ವಿಶೇಷತೆಯನ್ನು ಹೊಂದಿದೆ. ಇಲ್ಲಿ ಎಲ್ಲ ಧರ್ಮದವರು ಶಾಂತಿ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಇಲ್ಲಿ ಶಾಂತಿ ಸುವ್ಯವಸ್ಥೆ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ನಿಮಿತ್ತ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಅಧಿಕಾಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಪ್ರತಿಯೊಬ್ಬರು ಶಾಂತಿ ಸಹಬಾಳ್ವೆಯಿಂದ ಹಬ್ಬ ಆಚರಿಸುವಂತೆ ಸುವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್ಪಿ ಬಿ.ಎಲ್.ಶ್ರೀಹರಿಬಾಬು ಮಾತನಾಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆಗಳಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ನಿರಂತರ ವಿದ್ಯುತ್ ಸರಬರಾಜಿಗೆ ವ್ಯವಸ್ಥೆ ಮಾಡಲು ಮತ್ತು ಅಲ್ಲಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು. ರಸ್ತೆಯಲ್ಲಿನ ತಗ್ಗು ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಅನುಮತಿ ಪಡೆದು ಬ್ಯಾನರ್ ಅಳವಡಿಸಬೇಕು. ಗಣಪತಿ ವಿಗ್ರಹಗಳ ವಿಸರ್ಜನೆ ಸ್ಥಳದಲ್ಲಿ ನುರಿತ ಈಜುಪಟುಗಳು ಇರುವಂತೆ ನೋಡಿಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಸ್ಥಾಪಿಸುವಂತಾಗಬೇಕು. ಈ ನಿಟ್ಟಿನಲ್ಲಿ ಯಾರಾದರು ಪಿಓಪಿಯ ವಿಗ್ರಹಗಳನ್ನು ಬಳಸಿದರೆ ಈ ಬಗ್ಗೆ ಮಾಹಿತಿ ನೀಡಬೇಕು. ಗಣಪತಿ ವಿಗ್ರಹಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅವಘಡಗಳು ಆಗದಂತೆ ಆಯಾ ಮಾರ್ಗಗಳಲ್ಲಿ ಬಾಗಿರುವ ಗಿಡಗಳ ಟೊಂಗೆಗಳನ್ನು ತೆರವುಗೊಳಿಸಬೇಕು ಎಂದರು.
ಡಿವೈಎಸ್ಪಿ ಟಿ.ಮಂಜುನಾಥ, ಜಿ.ಪಂ. ಉಪ ಕಾರ್ಯದರ್ಶಿ ಭೀಮಣ್ಣ ಲಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ, ನಗರಸಭೆ ಪೌರಾಯುಕ್ತ ಚಂದ್ರಪ್ಪ ಇತರರಿದ್ದರು.