ಶಾಂತಿಯುತ ಹಬ್ಬ ಆಚರಣೆಗೆ ಕ್ರಮಕೈಗೊಳ್ಳಿ ; ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಸೂಚನೆ

Hosapete Ganesh festival meeting
ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ನಿಮಿತ್ತ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಎಂ.ಎಸ್.ದಿವಾಕರ, ಎಸ್ಪಿ ಬಿ.ಎಲ್.ಶ್ರೀಹರಿಬಾಬು ಅವರು ಅಧಿಕಾರಿಗಳ ಸಭೆ ನಡೆಸಿದರು.
Published on


ಹೊಸಪೇಟೆ : ಜಿಲ್ಲೆ ಐತಿಹಾಸಿಕ ವಿಶೇಷತೆ ಹೊಂದಿದೆ. ಇಲ್ಲಿ ಎಲ್ಲ ಧರ್ಮ ದವರು ಸೌಹಾರ್ದದಿಂದ ಜೀವನ ನಡೆಸುತ್ತಿದ್ದು, ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಅನ್ನು ಶಾಂತಿಯುತವಾಗಿ ಆಚರಿಸ ಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಅಧಿಕಾಗಳ ಸಭೆಯಲ್ಲಿ ಮಾತನಾಡಿದರು. ಎರಡೂ ಹಬ್ಬಗಳನ್ನು ಶಾಂತಿ ಸೌಹಾರ್ದದಿಂದ ಆಚರಿಸುವಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಎಸ್ಪಿ ಬಿ.ಎಲ್.ಶ್ರೀಹರಿಬಾಬು ಮಾತನಾಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಹೊರಡಿಸುವ ಸುತ್ತೋಲೆಗಳಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ನಿರಂತರ ವಿದ್ಯುತ್ ಸರಬರಾಜು ಮತ್ತು ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು. ರಸ್ತೆಯಲ್ಲಿ ತಗ್ಗು ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಅನುಮತಿ ಪಡೆದು ಬ್ಯಾನರ್ ಅಳವಡಿಸಬೇಕು. ಗಣಪತಿ ವಿಗ್ರಹಗಳ ವಿಸರ್ಜನೆ ಸ್ಥಳದಲ್ಲಿ ನುರಿತ ಈಜುಪಟುಗಳು ಇರುವಂತೆ ನೋಡಿಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಸ್ಠಾಪಿಸುವಂತಾಗಬೇಕು. ಯಾರಾದರೂ ಪಿಒಪಿ ವಿಗ್ರಹಗಳನ್ನು ಮಾರುತ್ತಿದ್ದರೆ ಮಾಹಿತಿ ನೀಡಬೇಕು. ಗಣಪತಿ ವಿಗ್ರಹಗಳ ವಿಸರ್ಜನೆ ವೇಳೆ ಯಾವುದೇ ಅವಘಡಗಳು ಆಗದಂತೆ ಆಯಾ ಮಾರ್ಗಗಳಲ್ಲಿ ಬಾಗಿರುವ ಗಿಡಗಳ ಟೊಂಗೆಗಳನ್ನು ಕತ್ತರಿಸಬೇಕು ಎಂದು ತಿಳಿಸಿದರು.

ಡಿವೈಎಸ್ಪಿ ಟಿ.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಭೀಮಣ್ಣ ಲಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ, ನಗರಸಭೆ ಪೌರಾಯುಕ್ತ ಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net