ಹೊಸಪೇಟೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾವತ್ತೂ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿ. ಎಂದಿಗೂ ಅವರು ಜನರ ಪರವೇ ಹೊರತು, ಅವರ ಸ್ವಾರ್ಥಕ್ಕಾಗಿ ದುಡಿದವರಲ್ಲ. ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದು ಅವರ ಪಕ್ಷದ ಆಂತರಿಕ ವಿಚಾರವಾಗಿದೆ ಎಂದು ಕಾಂಗ್ರೆಸ್ ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಎಚ್.ಡಿ. ದೇವೇಗೌಡರು, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು.
ಹನಿಟ್ರಾಪ್, ಫೋನ್ ಟ್ಯಾಪಿಂಗ್ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ನೋಡಿಕೊಳ್ತಾರೆ. ತನಿಖೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದರು.