ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಅನುಷ್ಠಾನ

28 MANJU 02
Published on

ಹೊಸಪೇಟೆ: ಸರ್ಕಾರದ ಪಂಚ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಅಧಿಕಾರಿಗಳ ಜತೆಗೆ ಪರಾಮರ್ಶೆ ನಡೆಸಿದಾಗ ಕೆಲ ಲೋಪದೋಷಗಳು ಕಂಡು ಬಂದಿದೆ. ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್. ಆರ್.ಮೆಹರೋಜ್ ಖಾನ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಪಂಚ ಗ್ಯಾರಂಟಿಗಳನ್ನು ರಾಜ್ಯಾದ್ಯಂತ ಅನುಷ್ಠಾನ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರ ಬಜೆಟ್‌ನಲ್ಲೇ 58 ಸಾವಿರ ಕೋಟಿ ರೂ. ತೆಗೆದಿರಿಸಿದೆ. ರಾಜ್ಯಾದ್ಯಂತ 4.5 ಕೋಟಿ ಜನರು ಫಲಾನುಭವಿಗಳಿದ್ದಾರೆ. ಹಾಗಾಗಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ವಿಜಯನಗರ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ 2,85,587 ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಹಣ ಸಂದಾಯ ಮಾಡಲಾಗುತ್ತಿದೆ. ಗೃಹ ಜ್ಯೋತಿಯಡಿ 1,84,515 ಫಲಾನುಭವಿಗಳಿಗೆ ಶೂನ್ಯ ಬಿಲ್ಲು ಬರುತ್ತಿದೆ. 133.59 ಕೋಟಿ ರೂ. ಪಾವತಿಯಾಗಿದೆ. ಯುವನಿಧಿಯಲ್ಲಿ 6704 ಫಲಾನುಭವಿಗಳಿಗೆ ತಲಾ 3 ಸಾವಿರ ರೂ. ಹಾಗೂ ತಲಾ 1500 ರೂ.ನಂತೆ ಹಣ ಸಂದಾಯ ಮಾಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 2,99,126 ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 4,17,54,532 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ. ಯೋಜನೆಯಲ್ಲಿ ಕೆಲ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಪರಿಹರಿಸಲು ಸೂಕ್ತ ಕ್ರಮವಹಿಸಲಾಗುವುದು. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಶಕ್ತಿ ಯೋಜನೆ ಅನುಷ್ಠಾನಗೊಳಿಸಲು ಕೂಡ ಸೂಚಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಉಪಾಧ್ಯಕ್ಷರಾದ ಕೆ.‌ಬಡಾವಲಿ,  ಗುರುಬಸವರಾಜ, ಶಾಂತನಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net