

ಹೊಸಪೇಟೆ: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ತಾಲೂಕುಗಳಲ್ಲಿ ಯಾವುದೇ ಅಡಚಣೆ ಇಲ್ಲದೆ ಅಚ್ಚುಕಟ್ಟಾಗಿ ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿ ನಿಮಿತ್ತ ವಿಡಿಯೋ ಸಂವಾದ ಮೂಲಕ ಪೂರ್ವಭಾವಿ ಸಿದ್ಧತೆಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರರು ಕ್ರಮ ಕೈಗೊಳ್ಳಬೇಕು. ಜತೆಗೆ ಕಲಾತಂಡಗಳನ್ನು ಒದಗಿಸಲು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತ ಇಲಾಖೆಯವರು ಕ್ರಮವಹಿಸಬೇಕು. ಜಯಂತಿಯನ್ನು ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಆಚರಿಸಬೇಕು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಂಘ ಸಂಸ್ಥೆಗಳ ಮುಖಂಡರು ಜಯಂತ್ಯುತ್ಸವದಲ್ಲಿ ಭಾಗವಹಿಸಬೇಕು ಎಂದರು.
ವಿಡಿಯೋ ಸಂವಾದದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.