

ಹೊಸಪೇಟೆ: ಕುಷ್ಠರೋಗ ಭಾಧಿತ ಪ್ರದೇಶದಲ್ಲಿ ಹೆಚ್ಚಿನ ಜನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳು ಒಟ್ಟಾಗಿ ಶ್ರಮಿಸೋಣ ಎಂದು ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ ಅಲಿ ಷಾ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ನಿಮಿತ್ತ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.
ಕುಷ್ಠರೋಗ ಪ್ರಕರಣಗಳು ಪತ್ತೆಯಾದ ಪ್ರದೇಶ, ವಾರ್ಡುಗಳಿಗೆ ಹೆಚ್ಚಿನ ಆದ್ಯತೆ ನೀಡಿಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲೂಕು, ಗ್ರಾಮ ಪಂಚಾಯತ್‌ಗಳಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಹಮ್ಮಿಕೊಳ್ಳಬೇಕು. ಜಿಲ್ಲೆಯ ಆಶ್ರಮ ಶಾಲೆ, ವಸತಿ ನಿಲಯಗಳಲ್ಲಿ, ಶಾಲಾ, ಕಾಲೇಜುಗಳಲ್ಲಿ ಪ್ರಾರ್ಥನೆ ವೇಳೆಯಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಬೇಕು. ಸಾರ್ವಜನಿಕರಿಗೆ ಕುಷ್ಠರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ. ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ. ಕುಷ್ಠರೋಗ ಸಂಪೂರ್ಣ ವಾಸಿಯಾಗಬಲ್ಲ ರೋಗವಾಗಿದ್ದು, ವೈಜ್ಞಾನಿಕವಾಗಿ ನಿರಂತರ ಚಿಕಿತ್ಸೆಯ ಅಗತ್ಯವಿದೆ ಎಂದು ಮನದಟ್ಟು ಮಾಡಬೇಕು. ರೋಗದ ಲಕ್ಷಣಗಳು ಕಂಡುಬರುವವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕಿದೆ ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ೧೦೩ ಹೊಸ ಕುಷ್ಠರೋಗಿಗಳನ್ನು ಪತ್ತೆಹಚ್ಚಿದ್ದು, ೭೬ ಕುಷ್ಠರೋಗ ಫಲಾನುಭವಿಗಳಿಗೆ ಕುಷ್ಠರೋಗದಿಂದ ಗುಣಮುಖಗೊಳಿಸಲಾಗಿದೆ. ೧೧೧ ಕುಷ್ಠರೋಗಿಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.